ಮಾರ್ಚ್ 22ರಿಂದ ಮೂರು ದಿನ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಶುಭ ಮುನ್ಸೂಚನೆ

Sampriya

ಭಾನುವಾರ, 17 ಮಾರ್ಚ್ 2024 (13:06 IST)
ಬೆಂಗಳೂರು: ಕರ್ನಾಟಕದಲ್ಲಿ ಬಿಸಿಲಿನ ತಾಪಕ್ಕೆ ಜನ ಈಗಾಗಲೇ ಸುಸ್ತಾಗಿದ್ದಾರೆ. ಮತ್ತೊಂದೆಡೆ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ನೀರಿಗೆ ಹಾಹಾಕಾರ ಉಂಟಾಗಿದೆ. ಈ ಮಧ್ಯೆ ಹವಾಮಾನ ಇಲಾಖೆಯು ಶುಭ ಮುನ್ಸೂಚನೆಯನ್ನು ನೀಡಿದೆ.
 
ರಾಜ್ಯದ 13ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಾರ್ಚ್ 22ರಿಂದ ಮೂರು ದಿನಗಳ ಕಾಲ ವರುಣನ ಆಗಮನವಾಗಲಿದೆ.  ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
 
ಮತ್ತೊಂದೆಡೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿಯಲ್ಲಿ ಒಣಹವೆ ಮುಂದುವರಿಯಲಿದೆ. ಕಲಬುರಗಿಯಲ್ಲಿ 40.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಳಗಾವಿ ವಿಮಾನ ನಿಲ್ದಾಣದಲ್ಲಿ 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. 
 
ಬಾಗಲಕೋಟೆ, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ಬೆಂಗಳೂರು, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರಿನಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಇಲಾಖೆಯು ತಿಳಿಸಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ