ಮುಂಬೈ: ಬಾಲಿವುಡ್ ನ ಖ್ಯಾತ ನಟ ಮಿಥುನ್ ಚಕ್ರವರ್ತಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
73 ವರ್ಷದ ಬಾಲಿವುಡ್ ನಟ ಮತ್ತು ಬಿಜೆಪಿ ನಾಯಕ ಮಿಥುನ್ ಚಕ್ರವರ್ತಿಗೆ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಅವರನ್ನು ಕೋಲ್ಕೊತ್ತಾದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಈ ಬಗ್ಗೆ ಕುಟುಂಬಸ್ಥರು ಇನ್ನೂ ಅಧಿಕೃತ ಮಾಹಿತಿ ನೀಡಿಲ್ಲ. ಆದರೆ ಆತಂಕಗೊಂಡಿರುವ ಫ್ಯಾನ್ಸ್ ಅವರು ಬೇಗನೇ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತಿದ್ದಾರೆ.
1976 ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಮಿಥುನ್ ಚಕ್ರವರ್ತಿ ಮೊದಲ ಚಿತ್ರಕ್ಕೇ ರಾಷ್ಟ್ರಪ್ರಶಸ್ತಿ ಪಡೆದು ಮಿಂಚಿದವರು. ಬಳಿಕ ಹಲವಾರು ಸಿನಿಮಾಗಳಲ್ಲಿ ನಟಿಸಿ ಸಾಕಷ್ಟು ಅಭಿಮಾನಿಗಳನ್ನು ಸಂಪಾದಿಸಿದ್ದರು. ಕೇವಲ ಸಿನಿಮಾ ಮಾತ್ರವಲ್ಲದೆ ಬಿಜೆಪಿ ಸೇರಿ ರಾಜಕೀಯದಲ್ಲೂ ತೊಡಗಿಸಿಕೊಂಡಿದ್ದರು. ರಾಜ್ಯಸಭೆ ಸದಸ್ಯರಾಗಿಯೂ ಕೆಲಸ ಮಾಡಿದ್ದರು.
ಇತ್ತೀಚೆಗೆ ಅವರ ಕಲಾ ಸೇವೆಗಾಗಿ ಕೇಂದ್ರ ಸರ್ಕಾರ ಭಾರತದ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಭೂಷಣ ಪ್ರಶಸ್ತಿ ಘೋಷಣೆ ಮಾಡಿತ್ತು. ಇದೀಗ ಅವರ ಅನಾರೋಗ್ಯದ ಸುದ್ದಿ ಕೇಳಿಬಂದಿದೆ. ಸದ್ಯಕ್ಕೆ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ ಎಂದು ತಿಳಿದುಬಂದಿದೆ.
ಅವರ ಆರೋಗ್ಯದ ಬಗ್ಗೆ ಕುಟುಂಬದ ಕಡೆಯಿಂದ ಮಾಹಿತಿ ಬಂದಿಲ್ಲವಾದ್ದರಿಂದ ಗೊಂದಲಗಳು ಮುಂದುವರಿದಿದ್ದು, ಅವರ ಈಗಿನ ಸ್ಥಿತಿ ಗತಿ ಬಗ್ಗೆ ಮಾಹಿತಿ ನೀಡುವಂತೆ ಫ್ಯಾನ್ಸ್ ಸೋಷಿಯಲ್ ಮೀಡಿಯಾದಲ್ಲಿ ಕೋರುತ್ತಿದ್ದಾರೆ.