ಲಾಹೋರ್: ಐಸಿಸಿ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ಇಂದು ಮಾಜಿ ಚಾಂಪಿಯನ್ ಇಂಗ್ಲೆಂಡ್ ತಂಡವು ಕ್ರಿಕೆಟ್ ಶಿಶು ಅಫ್ಗಾನಿಸ್ಥಾನ ತಂಡದೊಂದಿಗೆ ಸೆಣಸಲಿದೆ.
ಟೂರ್ನಿಯ ಬಿ ಗುಂಪಿನ ಈ ಪಂದ್ಯವು ಉಭಯ ತಂಡಗಳಿಗೆ ನಿರ್ಣಾಯಕವಾಗಿದೆ. ಈ ಪಂದ್ಯದಲ್ಲಿ ಸೋತ ತಂಡವು ಟೂರ್ನಿಯಿಂದಲೇ ಹೊರಬೀಳಲಿದೆ. ಗೆದ್ದ ತಂಡಕ್ಕೆ ಸೆಮಿಫೈನಲ್ ಕನಸು ಜೀವಂತವಾಗಿ ಉಳಿಯಲಿದೆ.
ಇಂಗ್ಲೆಂಡ್ ತಂಡವು ತನ್ನ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಪರಾಭವಗೊಂಡಿದೆ. ರನ್ ಹೊಳೆ ಹರಿದ ಆ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು ಪ್ರಮುಖ ಆಟಗಾರರ ಅನುಪಸ್ಥಿತಿಯಲ್ಲಿ ಜಯಭೇರಿ ಬಾರಿಸಿದೆ.
ಚಾಂಪಿಯನ್ಸ್ ಟ್ರೋಫಿಗೆ ಪದಾರ್ಪಣೆ ಮಾಡಿರುವ ಅಫ್ಗನ್ ತಂಡವು ಈಗಾಗಲೇ ದಕ್ಷಿಣ ಆಫ್ರಿಕಾ ವಿರುದ್ಧ ಸೋಲು ಅನುಭವಿಸಿದೆ. ಐಸಿಸಿ ಏಕದಿನ ವಿಶ್ವಕಪ್ ಮತ್ತು ಐಸಿಸಿ ಟಿ20 ವಿಶ್ವಕಪ್ ಟೂರ್ನಿಗಳಲ್ಲಿ ಘಟಾನುಘಟಿ ತಂಡಗಳಿಗೆ ಆಘಾತ ನೀಡಿದ್ದ ಅಫ್ಗನ್ ತಂಡ ಮತ್ತೆ ಮೋಡಿ ಮಾಡುವ ತವಕದಲ್ಲಿದೆ.
ಭಾರತ ತಂಡವು ಬಾಂಗ್ಲಾದೇಶ ಮತ್ತು ಪಾಕಿಸ್ತಾನ ತಂಡಗಳನ್ನು ಮಣಿಸಿ ಈಗಾಗಲೇ ಸೆಮಿಫೈನಲ್‌ಗೆ ಮುನ್ನಡೆದಿದೆ. ಗುಂಪು ಹಂತದ ಕೊನೆಯ ಪಂದ್ಯದಲ್ಲಿ ಭಾನುವಾರ ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ. ನ್ಯೂಜಿಲೆಂಡ್ ತಂಡವೂ ಸೆಮಿಫೈನಲ್‌ಗೆ ಅರ್ಹತೆ ಪಡೆದಿರುವುದರಿಂದ ಈ ಪಂದ್ಯ ಔಪಚಾರಿಕವಾಗಿದೆ.