ಮುಂಬೈ: ಮುಂದಿನ ತಿಂಗಳು ಆರಂಭವಾಗುವ ಚಾಂಪಿಯನ್ಸ್ ಟ್ರೋಫಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರನ್ನು ಪಾಕಿಸ್ತಾನಕ್ಕೆ ಕಳುಹಿಸದಿರಲು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ನಿರ್ಧರಿಸಿದೆ.
ಶರ್ಮಾ ಪಾಕಿಸ್ತಾನಕ್ಕೆ ಪ್ರಯಾಣಿಸುತ್ತಾರೋ ಇಲ್ಲವೋ ಎಂಬುದು ದೊಡ್ಡ ಪ್ರಶ್ನೆಯಾಗಿತ್ತು. ಅದಕ್ಕೀಗ ಬಿಸಿಸಿಐ ತೆರೆ ಎಳೆದಿದೆ. ನಾಯಕನ ಭೇಟಿ ಮತ್ತು ಫೋಟೋಶೂಟ್‌ಗಾಗಿ ರೋಹಿತ್ ಶರ್ಮಾ ಅವರನ್ನು ಪಾಕಿಸ್ತಾನಕ್ಕೆ ಕಳುಹಿಸದಿರಲು ಬಿಸಿಸಿಐ ದೃಢ ನಿರ್ಧಾರ ತೆಗೆದುಕೊಂಡಿದೆ ಎಂದು ಗೌರವ್ ಗುಪ್ತ ತಿಳಿಸಿದ್ದಾರೆ.
ಚಾಂಪಿಯನ್ಸ್ ಟ್ರೋಫಿಗಾಗಿ ಪಾಕಿಸ್ತಾನಕ್ಕೆ ಪ್ರಯಾಣಿಸಲು ಭಾರತ ತಂಡವು ನಿರಾಕರಿಸಿದ ನಂತರ, ಟೂರ್ನಮೆಂಟ್ ಅನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲಾಗಿದೆ. ರೋಹಿತ್ ಶರ್ಮಾ ಟೂರ್ನಮೆಂಟ್ ಪೂರ್ವ ನಾಯಕರ ಸಭೆಗಾಗಿ ಪಾಕಿಸ್ತಾನಕ್ಕೆ ಪ್ರಯಾಣಿಸುವ ಬಗ್ಗೆ ಕೆಲವು ಪ್ರಶ್ನೆಗಳು ಉದ್ಭವಿಸಿದ್ದವು.
ಎಲ್ಲಾ ತಂಡಗಳ ನಾಯಕರು ಯಾವುದೇ ಐಸಿಸಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದ ಮೊದಲು ಒಟ್ಟುಗೂಡುತ್ತಾರೆ. ಅವರ ಯೋಜನೆಗಳು ಮತ್ತು ಗುರಿಗಳ ಬಗ್ಗೆ ಮಾತನಾಡುತ್ತಾರೆ. ಆದರೆ, ಭದ್ರತೆ ದೃಷ್ಟಿಯಿಂದ ಟೀಂ ಇಂಡಿಯಾ ಆಟಗಾರರನ್ನು ಪಾಕಿಸ್ತಾನಕ್ಕೆ ಕಳುಹಿಸಲು ಬಿಸಿಸಿಐ ಒಪ್ಪಿಗೆ ಸೂಚಿಸಿಲ್ಲ ಎನ್ನಲಾಗಿದೆ.