ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್‌ಗೆ ಕ್ಷಣಗಣನೆ ಆರಂಭವಾಗಿದೆ. ಇಂದು ಮಧ್ಯಾಹ್ನ 2.30ಕ್ಕೆ ಆರಂಭವಾಗುವ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗುತ್ತಿವೆ.
2013ರಲ್ಲಿ ಪ್ರಶಸ್ತಿ ಗೆದ್ದಿರುವ ಭಾರತ ತಂಡವು 12 ವರ್ಷಗಳ ನಂತರ ಮತ್ತೊಮ್ಮೆ ಕಿರೀಟ ಮುಡಿಗೇರಿಸಿಕೊಳ್ಳುವ ಕ್ಷಣವನ್ನು ಕಣ್ತುಂಬಿಕೊಳ್ಳಲು ದೇಶದ ಕೋಟ್ಯಂತರ ಕ್ರಿಕೆಟ್ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ.
ಭಾರತ ತಂಡದ ಗೆಲುವಿಗಾಗಿ ಅಭಿಮಾನಿಗಳು ಪೂಜೆ, ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಉತ್ತರ ಪ್ರದೇಶದ ವಾರಾಣಸಿಯ ದೇವಸ್ಥಾನದಲ್ಲಿ ನೂರಾರು ಅಭಿಮಾನಿಗಳು ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ್ದಾರೆ. ಜತೆಗೆ ಟೀಂ ಇಂಡಿಯಾ ಆಟಗಾರರಿಗೆ ಶುಭ ಕೋರಿದ್ದಾರೆ. ಉತ್ತರ ಪ್ರದೇಶದ ಕಾನ್ಪುರದಲ್ಲಿ ಟೀಂ ಇಂಡಿಯಾ ಗೆಲುವಿಗಾಗಿ ಕ್ರಿಕೆಟ್ ಅಭಿಮಾನಿಗಳಿಂದ ಪೂಜೆ, ಪ್ರಾರ್ಥನೆ ಸಲ್ಲಿಸಿದ್ದಾರೆ
ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ಬಳಗವು ನ್ಯೂಜಿಲ್ಯಾಂಡ್‌ನ ಮಿಚೆಲ್ ಸ್ಯಾಂಟನರ್ ಬಳಗವನ್ನು ಎದುರಿಸಲಿದೆ.