ಮಹಿಳಾ ಮೀಸಲಾತಿಗೆ ಬದ್ಧ :ಸೋನಿಯಾ

ಬುಧವಾರ, 7 ಮೇ 2008 (16:50 IST)
ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ನೀಡಲು ಕಾಂಗ್ರೆಸ್ ಸರ್ಕಾರ ಬದ್ದವಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತಿಳಿಸಿದ್ದಾರೆ.

ನಗರದಲ್ಲಿ ಸರ್ಕಾರಿ ಶಾಲಾ ಮೈದಾನದಲ್ಲಿ ಇಂದು(ಬುಧವಾರ) ನಡೆದ ಬಹಿರಂಗ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರದಿಂದ ಉತ್ತಮ ಆಡಳಿತ ಅಸಾಧ್ಯ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಪೂರ್ಣ ಬಹುಮತದೊಂದಿಗೆ ಗೆಲ್ಲಿಸಬೇಕೆಂದು ಮತದಾರರಲ್ಲಿ ಮನವಿ ಮಾಡಿದರು.

ಕಾಂಗ್ರೆಸ್ ಪ್ರಣಾಳಿಕೆಯ ಕುರಿತು ತೃಪ್ತಿ ವ್ಯಕ್ತಪಡಿಸಿದ ಅವರು, ಜನಪರ ಕಾಳಜಿಯನ್ನು ಹೊಂದಿರುವ ಕಾಂಗ್ರೆಸ್ ಪ್ರಣಾಳಿಕೆ ಎಲ್ಲಾ ವರ್ಗದವರನ್ನು ಗಮನದಲ್ಲಿಟ್ಟುಕೊಂಡು ತಯಾರಿಸಲಾಗಿದೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ವಿತ್ತ ಸಚಿವ ಪಿ. ಚಿದಂಬರಂ ಅವರು ಮಂಡಿಸಿರುವ ಬಜೆಟ್ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

ತಮ್ಮ ಮಾತಿನ ಉದ್ದಕ್ಕೂ ಹಿಂದಿನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅವರು, ಎನ್‌ಡಿಎ ಸರ್ಕಾರದ ಅವಧಿಯಲ್ಲಿಯೇ ಸಂಸತ್ ಮೇಲೆ ಉಗ್ರರು ದಾಳಿ ಮಾಡಿದ್ದಲ್ಲದೆ, ಅಲ್ಲಿಂದಲೇ ಉಗ್ರರ ಅಟ್ಟಹಾಸ ಪ್ರಾರಂಭಗೊಂಡಿದೆ ಎಂದು ಆರೋಪಿಸಿದರು.

ವೆಬ್ದುನಿಯಾವನ್ನು ಓದಿ