ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಪತ್ರಕರ್ತ ಪ್ರತಾಪ್ ಸಿಂಹ್ ಅವರು ಹಾಲಿ ಸಂಸದ, ಕಾಂಗ್ರೆಸ್ ಅಭ್ಯರ್ಥಿ ಎಚ್.ವಿಶ್ವನಾಥ್ ಅವರ ವಿರುದ್ಧ ಗೆಲುವು ಸಾಧಿಸಿದ್ದಾರೆ. ತವರು ಜಿಲ್ಲೆಯ ಸೋಲಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತೀವ್ರ ಮುಖಭಂಗವಾಗಿದೆ.
ಮೈಸೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೃಷ್ಣ್ಣರಾಜ, ಚಾಮರಾಜ, ನರಸಿಂಹರಾಜ, ಹುಣಸೂರು ಹಾಗೂ ಪಿರಿಯಾಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರೇ ಇದ್ದಾರೆ. ಚಾಮುಂಡೇಶ್ವರಿಯಲ್ಲಿ ಮಾತ್ರ ಜೆಡಿಎಸ್ ಶಾಸಕರಿದ್ದಾರೆ. ಮೈಸೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಮಡಿಕೇರಿ ಮತ್ತು ವೀರಾಜಪೇಟೆಯಲ್ಲಿ ಬಿಜೆಪಿ ಶಾಸಕರಿದ್ದಾರೆ.
ಸ್ವತಃ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿರುವುದು, ಐವರು ಶಾಸಕರಿರುವುದು ಮತ್ತು ಜಿಲ್ಲೆಯನ್ನು ಇಬ್ಬರು ಸಚಿವರು ಪ್ರತಿನಿಧಿಸುತ್ತಿರುವುದು, ಕಾಂಗ್ರೆಸ್‌ನಿಂದ ಹಿಂದುಳಿದ ಕುರುಬ ಜನಾಂಗಕ್ಕೆ ಸೇರಿದ ವಿಶ್ವನಾಥ್ ಅಭ್ಯರ್ಥಿ ಆಗಿರುವುದು, ಬಿಜೆಪಿ ಹಾಗೂ ಜೆಡಿಎಸ್ ಅಭ್ಯರ್ಥಿಗಳು ಒಕ್ಕಲಿಗ ಜನಾಂಗಕ್ಕೆ ಸೇರಿದವರಾಗಿದ್ದರಿಂದ ಮತಗಳ ವಿಭಜನೆಯಾಗಿ ಕಾಂಗ್ರೆಸ್ ಗೆಲುವು ಸುಲಭ ಎಂದು ಎಣಿಸಲಾಗಿತ್ತು. ಆದರೆ ಕಾಂಗ್ರೆಸ್ ಒಂದು ಪ್ರಬಲ ವರ್ಗಧ ವಿರೋಧ, ಮೋದಿ ಅಲೆಯಲ್ಲಿ ಕೊಚ್ಚಿ ಹೋಗಿದೆ.