ಕಾಂಗ್ರೆಸ್ ಪಕ್ಷವನ್ನು ತ್ಯಜಿಸಿ ಹೊರನಡೆಯುತ್ತೇನೆ ಎಂದ ಮಾಜಿ ಸಚಿವ ರೋಷನ್ ಬೇಗ್

ಮಂಗಳವಾರ, 21 ಮೇ 2019 (11:54 IST)
ಬೆಂಗಳೂರು : ಎಕ್ಸಿಟ್ ಪೋಲ್ ವರದಿಯಲ್ಲಿ ಕಾಂಗ್ರೆಸ್ ಗೆ ಹಿನ್ನಡೆಯಾಗಿದೆ ಎಂದು ತಿಳಿದು ಕಾಂಗ್ರೆಸ್ ನ ಮಾಜಿ ಸಚಿವ ರೋಷನ್ ಬೇಗ್ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಹಾಗೂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.




ಮಾಧ್ಯಮವೊಂದರಲ್ಲಿ ಮಾತನಾಡಿದ ಅವರು, ಈ ಭಾರಿಯೂ ಎನ್​ ಡಿಎ ಸರ್ಕಾರವೇ ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ. ಎನ್ ​ಡಿಎ ಮೈತ್ರಿಕೂಟ ಸರಳ ಬಹುಮತ ಪಡೆಯುವುದು ಬಹುತೇಕ ನಿಶ್ಚಳವಾಗಿದೆ. ಈ ಸಮೀಕ್ಷೆಗಳ ಕುರಿತು ನನಗೇನು ಆಶ್ಚರ್ಯವಿಲ್ಲ. ಇದೇ ಸಮಯದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಕಳಪೆ ಸಾಧನೆ ಮಾಡಿದೆ. ಬಹುತೇಕ ಸ್ಥಾನಗಳನ್ನು ಕಳೆದುಕೊಳ್ಳಲಿದೆ. ಇದಕ್ಕೆ ರಾಜ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಕಾರಣ’ ಎಂದು ಹೇಳಿದ್ದಾರೆ.


ಮಾಜಿ ಮುಖ್ಯಮಂತ್ರಿ ವಿರುದ್ಧವೂ ವಾಗ್ದಾಳಿ ನಡೆಸಿರುವ ಅವರು, “ಚುನಾವಣಾ ನಾಯಕತ್ವ ವಹಿಸಿದ್ದ ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರಾದ ಸಿದ್ದರಾಮಯ್ಯನವರೂ ಸಹ ತಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಿಲ್ಲ. ಪರಿಣಾಮ ಜನ ಮೈತ್ರಿ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಈ ಅಸಮಾಧಾನದಿಂದ ಕಾಂಗ್ರೆಸ್ ಅನೇಕ ಸ್ಥಾನಗಳನ್ನು ಕಳೆದುಕೊಳ್ಳಲಿದೆ ಎಂದು ತಿಳಿಸಿದ್ದಾರೆ.


ದಶಕಗಳ ಕಾಲ ಮುಸ್ಲಿಂ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಬೆನ್ನೆಲುಬಾಗಿ ನಿಂತಿದ್ದಾರೆ. ಆದರೆ, ಮುಸ್ಲಿಮರಿಗೆ ಲೋಕಸಭೆ ಟಿಕೆಟ್ ನೀಡಲು ಕಾಂಗ್ರೆಸ್ ಮೀನಾಮೇಷ ಎಣಿಸುತ್ತದೆ. ಈ ಬಾರಿಯ ಚುನಾವಣೆಯಲ್ಲೂ 28 ಕ್ಷೇತ್ರಗಳ ಪೈಕಿ ಒಂದು ಸ್ಥಾನವನ್ನು ಮಾತ್ರ ಮುಸ್ಲಿಂ ಸಮುದಾಯದವರಿಗೆ ಬಿಟ್ಟುಕೊಡಲಾಗಿದೆ. ಸಾಮಾನ್ಯವಾಗಿ ಇದು ಮುಸ್ಲಿಮರನ್ನು ಕೆರಳಿಸಿದೆ. ಪರಿಸ್ಥಿತಿ ಹೀಗೆ ಮುಂದುವರೆದರೆ ನಾನು ಕಾಂಗ್ರೆಸ್ ಪಕ್ಷವನ್ನು ತ್ಯಜಿಸಿ ಹೊರನಡೆಯಲೂ ಸಿದ್ಧ ಎಂದು ಕಿಡಿಕಾರಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ