ಕುಂದಗೋಳ ಉಪ ಚುನಾವಣೆ ಹಿನ್ನಲೆ; ಅಭ್ಯರ್ಥಿಯ ಪರ ಮತಗಟ್ಟೆಗೆ ಪೂಜೆ ಸಲ್ಲಿಸಿದ ಬಿಜೆಪಿ ಕಾರ್ಯಕರ್ತರು
ಭಾನುವಾರ, 19 ಮೇ 2019 (10:34 IST)
ಹುಬ್ಬಳ್ಳಿ : ಕುಂದಗೋಳ ಉಪ ಚುನಾವಣೆ ಮತದಾನದ ಹಿನ್ನಲೆಯಲ್ಲಿ ತಮ್ಮ ಅಭ್ಯರ್ಥಿಯ ಪರವಾಗಿ ಬಿಜೆಪಿ ಕಾರ್ಯಕರ್ತರು ಮತಗಟ್ಟೆಗೆ ಪೂಜೆ ಸಲ್ಲಿಸಿದ್ದಾರೆ.
ಬೆಳ್ಳಂಬೆಳಗ್ಗೆ ಅದರಗುಂಚಿ ಸರ್ಕಾರಿ ಶಾಲೆಯ ಮತಗಟ್ಟೆ ಸಂಖ್ಯೆ 65ಕ್ಕೆ ಆಗಮಿಸಿದ ಬಿಜೆಪಿ ಕಾರ್ಯಕರ್ತರು, ಮತಗಟ್ಟೆಯ ಬಾಗಿಲಿಗೆ ಅರಿಸಿನ, ಕುಂಕುಮ ಹಚ್ಚಿ, ತೋರಣದ ರೀತಿಯಲ್ಲಿ ಹೂವಿನ ಮಾಲೆ ಹಾಕಿ, ಬಳಿಕ ಹೊಸಲಿನ ಬಳಿ ತೆಂಗಿನಕಾಯಿ ಒಡೆದು ತಮ್ಮ ಅಭ್ಯರ್ಥಿ ಎಸ್.ಐ. ಚಿಕ್ಕನಗೌಡರ್ ಪರವಾಗಿ ಪೂಜೆ ಸಲ್ಲಿಸಿ ಅವರು ಗೆಲ್ಲಲಿ ಎಂದು ಆಶಿಸಿದ್ದಾರೆ.
ಇಂದು ರಾಜ್ಯದ ಎರಡು ಕ್ಷೇತ್ರಗಳಾದ ಕುಂದಗೋಳ ಮತ್ತು ಚಿಂಚೋಳಿ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯುತ್ತಿದೆ. ಕುಂದಗೋಳ ವಿಧಾನಸಭಾ ಕ್ಷೇತ್ರದಿಂದ ಮೈತ್ರಿ ಅಭ್ಯರ್ಥಿ ಕುಸುಮಾ ಶಿವಳ್ಳಿ, ಬಿಜೆಪಿ ಅಭ್ಯರ್ಥಿ ಎಸ್.ಐ.ಚಿಕ್ಕನಗೌಡರ್ ಸೇರಿದಂತೆ 8 ಜನ ಅಭ್ಯರ್ಥಿಗಳು ಕಣದಲ್ಲಿ ಇದ್ದಾರೆ. ಚಿಂಚೋಳಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಡಾ. ಅವಿನಾಶ್ ಜಾಧವ್, ಕಾಂಗ್ರೆಸ್ ಅಭ್ಯರ್ಥಿ ಸುಭಾಷ್ ರಾಥೋಡ್ ಸೇರಿದಂತೆ ಒಟ್ಟು 17 ಜನ ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.