ಮುಂಬೈ: ಐಪಿಎಲ್ ಈ ಬಾರಿಯ ಆವೃತ್ತಿ ರೋಚಕ ಘಟ್ಟದತ್ತ ಸಾಗುತ್ತಿದೆ. ಇಂದು ಕ್ರಿಕೆಟ್ ಪ್ರೇಮಿಗಳಿಗೆ ಡಬಲ್ ಧಮಾಕಾ. ವಾರಾಂತ್ಯದಲ್ಲಿ ಎರಡು ಪಂದ್ಯಗಳು ನಡೆಯುತ್ತಿದ್ದು ಮುಂಬೈನಲ್ಲಿ ಆತಿಥೇಯ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗುತ್ತಿವೆ. ಮತ್ತೊಂದು ಲಖನೌ ಸೂಪರ್‌ಜೈಂಟ್ಸ್ ತಂಡವು ಗುಜರಾತ್ ಟೈಟನ್ಸ್ ತಂಡವನ್ನು ಎದುರಿಸಲಿದೆ.
ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡವು ಟೂರ್ನಿಯಲ್ಲಿ ಇನ್ನೂ ಗೆಲುವಿನ ಖಾತೆ ತೆರೆದಿಲ್ಲ. ಆಡಿರುವ ಮೂರೂ ಪಂದ್ಯಗಳಲ್ಲಿ ಸೋತಿರುವ ಪಾಂಡ್ಯ ಬಳಗ, ನಾಲ್ಕನೇ ಪಂದ್ಯದಲ್ಲಿ ಗೆಲುವಿನ ಹಳಿಗೆ ಮರಳುವ ಗುರಿ ಹಾಕಿಕೊಂಡಿದೆ.
ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಐಪಿಎಲ್ ಪಂದ್ಯಕ್ಕೂ ಮುನ್ನ ಇಂಡಿಯನ್ಸ್ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದೆ. ಟಿ20 ಕ್ರಿಕೆಟ್‌ನ ನಂಬರ್ ವನ್ ಬ್ಯಾಟರ್ ಸೂರ್ಯಕುಮಾರ್ ಯಾದವ್ ತಂಡ ಸೇರಿಕೊಂಡಿದ್ದು, ಮುಂದಿನ ಪಂದ್ಯದಲ್ಲಿ ಅಬ್ಬರಿಸುವ ಸಾಧ್ಯತೆ ಇದೆ. ತವರಿನ ಅಭಿಮಾನಿಗಳ ಮುಂದೆ ಆಡಿದ ಕೊನೆಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ರಾಜಸ್ಥಾನ್ ರಾಯಲ್ಸ್ ವಿರುದ್ಧ ಮುಗ್ಗರಿಸಿತ್ತು. ಇದೀಗ ಮತ್ತೆ ಹೊಸ ಹುರುಪಿನೊಂದಿಗೆ ಪುಟಿದೆದ್ದು ಆಡುವ ಉತ್ಸಾಹದಲ್ಲಿದೆ.
ರಿಷಭ್ ಪಂತ್ ನಾಯಕತ್ವದ ಡೆಲ್ಲಿ ತಂಡವು ಆಡಿರುವ ನಾಲ್ಕು ಪಂದ್ಯಗಳಲ್ಲಿ ಒಂದರಲ್ಲಿ ಮಾತ್ರ ಗೆದ್ದಿದ್ದು, ಮೂರರಲ್ಲಿ ಸೋತಿದೆ. ಇದೀಗ ಗೆಲುವಿನ ಲಯ ಕಂಡುಕೊಳ್ಳಲು ಪ್ರಯತ್ನಿಸುತ್ತಿದೆ.
ಮತ್ತೊಂದು ಪಂದ್ಯದಲ್ಲಿ ಲಖನೌ ತಂಡದ ವೇಗದ ಬೌಲಿಂಗ್‌ನ ಯುವತಾರೆ ಮಯಂಕ್ ಯಾದವ್ ಅವರ ಮೇಲೆ ಎಲ್ಲರ ದೃಷ್ಟಿ ನೆಟ್ಟಿದೆ. ಅವರ ಅಮೋಘ ದಾಳಿಯಿಂದಾಗಿ ಸತತ ಎರಡು ಪಂದ್ಯಗಳಲ್ಲಿ ಜಯಿಸಿರುವ ಲಖನೌ ಸೂಪರ್ ಜೈಂಟ್ಸ್ ಭಾನುವಾರ ಗುಜರಾತ್ ಟೈಟನ್ಸ್ ವಿರುದ್ಧ ಕಣಕ್ಕಿಳಿಯಲಿದೆ. ಕೆ.ಎಲ್. ರಾಹುಲ್ ನಾಯಕತ್ವದ ಲಖನೌ ತಂಡವು ಹ್ಯಾಟ್ರಿಕ್ ಗೆಲುವಿನ ವಿಶ್ವಾಸದಲ್ಲಿದೆ.
ಲಖನೌ ತಂಡವು ಟೂರ್ನಿಯಲ್ಲಿ ಮೂರು ಪಂದ್ಯಗಳನ್ನು ಆಡಿದೆ. ಅದರಲ್ಲಿ ಎರಡರಲ್ಲಿ ಗೆದ್ದು ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಇನ್ನೊಂದೆಡೆ ಹೊಸ ನಾಯಕ ಶುಭಮನ್ ಗಿಲ್ ಟೂರ್ನಿಯಲ್ಲಿ ಇದುವರೆಗೆ ಮಿಶ್ರಫಲ ಪಡೆದಿದ್ದಾರೆ. ನಾಲ್ಕು ಪಂದ್ಯಗಳಲ್ಲಿ ಎರಡು ಗೆದ್ದಿರುವ ತಂಡವು ಇನ್ನೆರಡರಲ್ಲಿ ಸೋತಿದೆ.