ತೆರಿಗೆ ಸಂಗ್ರಹದಲ್ಲಿ ರಾಜ್ಯ ನಂ.1
ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ ವಾಣಿಜ್ಯ ತೆರಿಗೆ ಸಂಗ್ರಹದ ಬೆಳವಣಿಗೆ ದರ ಶೇ.19.2ರಷ್ಟಿದ್ದು, ಈ ಬೆಳವಣಿಗೆ ದರ ಇಡೀ ದೇಶದಲ್ಲಿಯೇ ಅತಿ ಹೆಚ್ಚು. ಆ ಮೂಲಕ, ಸರಕು ಮತ್ತು ಸೇವಾ ತೆರಿಗೆ ಮತ್ತು ಮಾರಾಟ ತೆರಿಗೆ ಸಂಗ್ರಹದ ಸಾಧನೆಯಲ್ಲಿ ಕರ್ನಾಟಕವು ದೇಶಕ್ಕೆ ನಂಬರ್ ಒನ್ ಎನಿಸಿಕೊಂಡಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ವಾಣಿಜ್ಯ ತೆರಿಗೆ ಇಲಾಖೆಯ ಪ್ರಗತಿ ಪರಿಶೀಲನೆ ಗುರುವಾರ ನಡೆಸಿದ ಮುಖ್ಯಮಂತ್ರಿ, ರಾಜ್ಯದ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ದೇಶದ ಒಟ್ಟಾರೆ ತೆರಿಗೆ ಸಂಗ್ರಹದಲ್ಲಿ ರಾಜ್ಯದ ಪಾಲು ಶೇ 9.4ರಷ್ಟಿದೆ. ಕಳೆದ ಬಾರಿಗಿಂತ ಈ ಬಾರಿ ರಾಜ್ಯದ ಪಾಲು ಹೆಚ್ಚಾಗಿದೆ ಎಂದು ಅಧಿಕಾರಿಗಳು ಮುಖ್ಯಮಂತ್ರಿ ಅವರಿಗೆ ವಿವರಿಸಿದರು ದೇಶದ ಸರಾಸರಿ ತೆರಿಗೆ ಸಂಗ್ರಹ ಬೆಳವಣಿಗೆ ದರ ಶೇ 15ರಷ್ಟು ಮಾತ್ರ ಇದೆ. ಅದಕ್ಕೆ ಹೋಲಿಸಿದರೆ ತೆರಿಗೆ ಸಂಗ್ರಹ ವಿಚಾರದಲ್ಲಿ ಗಮನಾರ್ಹ ಸಾಧನೆ ಆಗಿದೆ. ಹಾಗೆಂದು, ಇಷ್ಟಕ್ಕೆ ಸಮಾಧಾನಪಟ್ಟುಕೊಳ್ಳದೆ ತೆರಿಗೆ ವಂಚನೆ ಪ್ರಕರಣಗಳನ್ನು ಹೆಚ್ಚೆಚ್ಚು ಪತ್ತೆ ಹಚ್ಚಿ ತೆರಿಗೆ ಸಂಗ್ರಹ ಗುರಿಯನ್ನು ದಾಟಿ ಸಾಧನೆ ಮಾಡುವ ಅವಕಾಶಗಳಿವೆ. ಅದನ್ನು ಸಾಧಿಸಿ ತೋರಿಸಬೇಕು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಕಿವಿಮಾತು ಹೇಳಿದರು.