ಬೆಂಗಳೂರು: ಕೊಲೆ ಪ್ರಕರಣದಲ್ಲಿ ದರ್ಶನ್‌ಗೆ 6 ತಿಂಗಳ ಬಳಿಕ ಜಾಮೀನು ಸಿಕ್ಕಿರುವುದಕ್ಕೆ ಅವರ ಅಭಿಮಾನಿಗಳಲ್ಲಿ ಸಂಭ್ರಮ ಮುಗಿಲು ಮುಟ್ಟಿದ್ದು, ಸಾಮಾಜಿಕ ಜಾಲತಾಣದಲ್ಲಿ ತಮ್ಮ ಖುಷಿಯನ್ನು ವ್ಯಕ್ತಪಡಿಸುತ್ತಿದ್ದಾರೆ.
ಈ ವಿಚಾರವಾಗಿ ನಟ ಪ್ರಕಾಶ್ ರಾಜ್ ಅವರಲ್ಲಿ ಮಾಧ್ಯಮದವರು ಪ್ರಶ್ನಿಸಿದಾಗ, ನಾನು ಇಲ್ಲಿಗೆ ಮಕ್ಕಳ ಬಗ್ಗೆ ಮಾತನಾಡಲು ಬಂದಿದ್ದೇನೆ. ನಾನು ಮಕ್ಕಳ ಬಗ್ಗೆ ಮಾತನಾಡುತ್ತೇನೆ ಹೊರತು ಕಳ್ಳನನ್ನ ಮಕ್ಕಳ ಬಗ್ಗೆ ಮಾತನಾಡುವುದಿಲ್ಲ ಎಂದು ಕುಟುಕಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳ ಮುಂದೆ ಮಾತನಾಡಿದ ಪ್ರಕಾಶ್ ರಾಜ್, ನಾನು ಖಾಸಗಿ ಕಾರ್ಯಕ್ರಮ ಹಿನ್ನೆಲೆಯಲ್ಲಿ ಚೆನ್ನೈನಿಂದ ಮೈಸೂರಿಗೆ ಬಂದಿದ್ದೇನೆ. ನಾನು ಸಿನಿಮಾ ಹಾಗೂ ರಾಜಕೀಯದ ಬಗ್ಗೆ ಮಾತನಾಡಲ್ಲ ನಾನು ನನ್ನ ಮಕ್ಕಳ ಬಗ್ಗೆ ಮಾತನಾಡಲು ಬಂದಿದ್ದೇನೆ ಎಂದರು.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಇತರ 7 ಆರೋಪಿಗಳಿಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್ ಸಿಕ್ಕಿದೆ. ಸದ್ಯ ದರ್ಶನ್ ಅವರು ಮಧ್ಯಂತರ ಜಾಮೀನು ಪಡೆದು ಬೆನ್ನುನೋವಿನ ಸಂಬಂದ ಚಿಕಿತ್ಸೆಗೆ ಒಳಗಾಗಿದ್ದಾರೆ.
ಶಸ್ತ್ರಚಿಕಿತ್ಸೆಗಾಗಿ ಮಧ್ಯಂತರ ಜಾಮೀನು ಪಡೆದು ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದ ನಟ ದರ್ಶನ್ ಗೆ ಈಗ ಜಾಮೀನು ದೊರೆತಿರುವ ಹಿನ್ನೆಲೆಯಲ್ಲಿ, ಅವರು ಶಸ್ತ್ರಚಿಕಿತ್ಸೆಗೆ ಒಳಗಾಗುವುದು ಅನುಮಾನ, ಫಿಸಿಯೋಥೆರೆಪಿ ಚಿಕಿತ್ಸೆಯನ್ನೇ ಮುಂದುವರೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.