ಅತ್ಯಾಚಾರ ಪ್ರಕರಣ: ಮಲಯಾಳ ನಟ ಸಿದ್ದೀಕ್‌ಗೆ ಸುಪ್ರೀಂ ಕೋರ್ಟ್‌ನಿಂದ ಗುಡ್‌ನ್ಯೂಸ್‌

Sampriya

ಮಂಗಳವಾರ, 19 ನವೆಂಬರ್ 2024 (14:50 IST)
Photo Courtesy X
ನವದೆಹಲಿ: ನಟಿ ಮೇಲಿನ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಮಲಯಾಳ ನಟ ಸಿದ್ದೀಕ್‌ಗೆ ಸುಪ್ರೀಂ ಕೋರ್ಟ್ ಇಂದು (ಮಂಗಳವಾರ) ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ನ್ಯಾಯಮೂರ್ತಿಗಳಾದ ಬೇಲಾ ಎಂ. ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರ ಪೀಠವು ಷರತ್ತು ಬದ್ಧ ಜಾಮೀನು ನೀಡಿದೆ. ಪಾಸ್‌ಪೋರ್ಟ್ ಅನ್ನು ಅಧಿಕಾರಿಗಳಿಗೆ ಒಪ್ಪಿಸಬೇಕು ಹಾಗೂ ತನಿಖೆಗೆ ಸಹಕರಿಸುವಂತೆ ಸಿದ್ದೀಕ್‌ ಅವರಿಗೆ ಸೂಚಿಸಲಾಗಿದೆ.

2016ರಲ್ಲಿ ಸಿದ್ದೀಕ್ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರೆಂದು ನಟಿಯೊಬ್ಬರು ಮ್ಯೂಸಿಯಂ ಪೊಲೀಸ್ ಠಾಣೆಯಲ್ಲಿ ನಟನ ವಿರುದ್ಧ ಐಪಿಸಿ ಸೆಕ್ಷನ್ 376 (ಅತ್ಯಾಚಾರ) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದರು.

ಮಾಲಿವುಡ್‌ನ ಹಲವು ನಿರ್ದೇಶಕರು ಮತ್ತು ನಟರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಕುರಿತಾದ ನಿವೃತ್ತ ನ್ಯಾಯಮೂರ್ತಿ ಹೇಮಾ ಸಮಿತಿಯ ವರದಿಯು ಬಹಿರಂಗವಾದ ಬಳಿಕ ಚಿತ್ರರಂಗದ ಹೈ ಪ್ರೊಫೈಲ್ ವ್ಯಕ್ತಿ ವಿರುದ್ಧ ದಾಖಲಾದ ಎರಡನೇ ಎಫ್‌ಐಆರ್ ಇದಾಗಿದೆ.

2009ರಲ್ಲಿ ನಡೆದ ಘಟನೆಯೊಂದಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ನಟಿಯೊಬ್ಬರು ನೀಡಿದ ದೂರಿನ ಮೇರೆಗೆ ನಿರ್ದೇಶಕ ರಂಜಿತ್ ವಿರುದ್ಧ ಐಪಿಸಿ ಸೆಕ್ಷನ್ 354ರ (ಮಹಿಳೆಯರ ಮೇಲಿನ ದೌರ್ಜನ್ಯ) ಅಡಿ ಮೊದಲ ಪ್ರಕರಣ ದಾಖಲಾಗಿತ್ತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ