ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದೆ. ನ್ಯಾಯಾಲಯಕ್ಕೆ ಶೀಘ್ರದಲ್ಲೇ ಆರೋಪ ಪಟ್ಟಿ ಸಲ್ಲಿಸಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ ಹೇಳಿದ್ದಾರೆ.
ಬೆಂಗಳೂರಿನಲ್ಲಿರುವ ವಿಧಿ ವಿಜ್ಞಾನ ಪ್ರಯೋಗಾಲಯದ ಎಲ್ಲ ವರದಿಗಳೂ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರಿಗೆ ಸಿಕ್ಕಿದೆ. ಹೈದರಾಬಾದ್‌ನಿಂದ ಎಫ್ಎಸ್‌ಎಲ್ ವರದಿಗಳು ಬರುವುದು ಬಾಕಿಯಿದ್ದು, ಇಂದು ಸಂಜೆ ಅಥವಾ ನಾಳೆ ವರದಿಗಳು ಬರಲಿವೆ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಪ್ರಕರಣದ ಎ2 ಆರೋಪಿ, ನಟ ದರ್ಶನ್ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದು ಅವರನ್ನು ನಟ ಚಿಕ್ಕಣ್ಣ ಭೇಟಿಯಾಗಿರುವ ಮಾಹಿತಿಯಿದೆ. ಕಾನೂನು ಪ್ರಕಾರ ಏನು ಕ್ರಮ ಕೈಗೊಳ್ಳಬೇಕು ಎಂಬುದನ್ನು ಪರಿಶೀಲಿಸಲಾಗುತ್ತಿದೆ ಎಂದು ಅವರು ಹೇಳಿದರು.
ಜೂನ್ 8ರಂದು ಕೃತ್ಯ ನಡೆಯುವುದಕ್ಕೂ ಮೊದಲು ಸ್ಟೋನಿ ಬ್ರೂಕ್ ರೆಸ್ಟೋರೆಂಟ್ ನಲ್ಲಿ ನಟ ಚಿಕ್ಕಣ್ಣ ಅವರು ದರ್ಶನ್ ಜೊತೆಗೆ ಪಾರ್ಟಿಯಲ್ಲಿ ಭಾಗಿ ಆಗಿದ್ದರು. ಅವರಿಗೆ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ನೋಟಿಸ್ ನೀಡಿ ವಿಚಾರಣೆ ನಡೆಸಿದ್ದರು.