ಏಕರೂಪ ವೇತನಕ್ಕೆ ಸಿಎಂ ಒಪ್ಪಿಗೆ

ಶನಿವಾರ, 22 ನವೆಂಬರ್ 2008 (10:12 IST)
ಕೇಂದ್ರ ಮತ್ತು ರಾಜ್ಯ ಸರಕಾರಿ ನೌಕರರ ಏಕರೂಪ ವೇತನ ಬೇಡಿಕೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಾತ್ವಿಕ ಒಪ್ಪಿಗೆ ನೀಡಿದ್ದಾರೆ.

ನಗರಕ್ಕೆ ಶುಕ್ರವಾರ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೇತನ ತಾರತಮ್ಯ ನಿವಾರಿಸಲು ರಾಷ್ಟ್ರೀಯ ಏಕರೂಪ ಜೀವನಾವಶ್ಯಕ ವೇತನ ನೀತಿ ರೂಪಿಸಬೇಕಿದೆ. ಈ ನಿಟ್ಟಿನಲ್ಲಿ ವೇತನ ಸಮಾನತೆ ಕುರಿತು ಕ್ರಮ ಕೈಗೊಳ್ಳುವಾಗ ಕೇಂದ್ರ ಹಾಗೂ ರಾಜ್ಯ ಸರಕಾರದ ಆದಾಯದ ತುಲನೆ ಮಾಡಬೇಕಿದೆ. ಸಮಾನ ಹುದ್ದೆಗೆ ಸಮಾನ ವೇತನದ ಬಗ್ಗೆ ಸರಕಾರ ಗಂಭೀರ ಚಿಂತನೆ ನಡೆಸಿದೆ ಎಂದು ತಿಳಿಸಿದರು.

ದಿನಗೂಲಿ ನೌಕರರ ಸೇವೆ ಕಾಯಂಗೊಳಿಸುವ ಕುರಿತು ಮಾತನಾಡಿದ ಅವರು, ಈ ಬಗ್ಗೆ ಸರಕಾರ ಚಿಂತನೆ ನಡೆಸಿದ್ದು, ನ್ಯಾಯಾಲಯದ ಆದೇಶವನ್ನು ಗಮನದಲ್ಲಿಟ್ಟುಕೊಂಡು ಅವರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಸಂಪುಟ ಸಮಿತಿ ರಚಿಸಲಾಗಿದೆ ಎಂದು ತಿಳಿಸಿದರು.

ಸಿಎಂ ಕಿವಿಮಾತು:

ಮೊದಲು ಸರಕಾರಿ ಕಾರ್ಯಕ್ರಮ ಜಾರಿಗೊಳಿಸಲು ಆದ್ಯತೆ ನೀಡಿ, ಸ್ವಲ್ಪ ಸಮಯದ ಬಳಿಕ ಆರ್ಥಿಕ ಪರಿಸ್ಥಿತಿ ನೋಡಿಕೊಂಡು ನಿಮ್ಮ ಸಮಸ್ಯೆ ಬಗೆಹರಿಸಲು ಪ್ರಯತ್ನಿಸುತ್ತೇನೆ ಎಂದು ಅವರು ಸರಕಾರಿ ನೌಕರರಿಗೆ ಕಿವಿಮಾತು ಹೇಳಿದರು.

ಪ್ರಸ್ತುತ ಅಮೆರಿಕದಲ್ಲಿ ಉಂಟಾಗಿರುವ ಆರ್ಥಿಕ ಹಿಂಜರಿತದ ಪರಿಣಾಮ ಎಲ್ಲಾ ದೇಶಗಳ ಮೇಲೆಯೂ ಆಗುತ್ತಿದೆ. ಇಂಥ ಕ್ಲಿಷ್ಟ ಸನ್ನಿವೇಶದಲ್ಲಿ ಸರಕಾರ ರೂಪಿಸುವ ಯೋಜನೆಗಳನ್ನು ಜಾರಿಗೊಳಿಸುವುದು ಮುಖ್ಯ. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ಸರಕಾರಿ ನೌಕರರಿಗೂ ತನ್ನ ಜವಾಬ್ದಾರಿ ಏನು ಎಂಬುದರ ಅರಿವಿರಬೇಕು ಎಂದು ಅವರು ಹೇಳಿದರು.

ವೆಬ್ದುನಿಯಾವನ್ನು ಓದಿ