ಕಾಂಗ್ರೆಸ್ ನಾಯಕರಿಗೆ ರಾಹುಲ್ ಗಾಂಧಿ ಎಚ್ಚರಿಕೆ?

ಸೋಮವಾರ, 24 ಡಿಸೆಂಬರ್ 2018 (17:29 IST)
ಮುಂಬರುವ ಲೋಕಸಭೆ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಸಚಿವ ಸ್ಥಾನ ವಂಚಿತರು ಆಕ್ರೋಶ ತೋಡಿಕೊಂಡಿರುವುದಕ್ಕೆ ಖಡಕ್ ವಾರ್ನಿಂಗ್ ನೀಡಿದ್ದಾರೆ.

ಕರ್ನಾಟಕದಲ್ಲಿ ಸಚಿವ ಸಂಪುಟ ಪುನರ್ ರಚನೆ ನಂತರ ಉಂಟಾಗಿರುವ ಅತೃಪ್ತಿ ಮತ್ತು ಅಸಮಾಧಾನದ ನಡುವೆಯೇ ಕೆಲವರು ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗುವ ಮುನ್ಸೂಚನೆ ಅರಿತಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಇಂತಹ ಚಟುವಟಿಕೆಗಳಲ್ಲಿ ಯಾರೇ ಭಾಗಿಯಾದರೂ, ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂಬ ಸಂದೇಶ ರವಾನಿಸಿದ್ದಾರೆ.

ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರದ ಸಂಪುಟ ವಿಸ್ತರಣೆ ಮತ್ತು ಪುನರ್ ರಚನೆ ಇತ್ತೀಚೆಗೆ ನಡೆದಿದ್ದು, ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಕೆಲವು ಶಾಸಕರು ಬಿಜೆಪಿಯತ್ತ ಮುಖಮಾಡಿದ್ದಾರೆ ಎಂಬ ವರದಿಗಳ ಹಿನ್ನೆಲೆಯಲ್ಲಿ ರಾಹುಲ್ ಅವರ ಸಂದೇಶ ಎಚ್ಚರಿಕೆ ಗಂಟೆಯಾಗಿದೆ.

ಸಚಿವ ಸ್ಥಾನ ಕಳೆದುಕೊಂಡಿರುವ ರಮೇಶ್ ಜಾರಕಿಹೊಳಿ ಹಾಗೂ ಆರ್. ಶಂಕರ್ ಅವರು ಪಕ್ಷದ ನಾಯಕರ ವಿರುದ್ಧವೇ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಮೇಶ್ ಜಾರಕಿಹೊಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಆಪ್ತರ ಬಳಿ ಹೇಳಿಕೊಂಡಿದ್ದಾರೆ. ಹಿರಿಯ ನಾಯಕರಾದ ಮಾಜಿ ಸಚಿವ ರಾಮಲಿಂಗಾ ರೆಡ್ಡಿ ತಮಗೆ ಸಚಿವ ಸ್ಥಾನ ಸಿಗದಿರುವ ಬಗ್ಗೆ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು,  ಪಕ್ಷದಲ್ಲಿ ತಳಮಳವನ್ನು ಉಂಟುಮಾಡಿದೆ. ಹೀಗಾಗಿ ರಾಹುಲ್ ಗಾಂಧಿ ಹೇಳಿಕೆ ಮಹತ್ವ ಪಡೆದುಕೊಂಡಿದೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ