ಕ್ಯಾನ್ಸರ್:ಕೊನೆಗೂ ಕಟ್ಟಾ ಸುಬ್ರಹ್ಮಣ್ಯ ನಾಯ್ಡುಗೆ ಮಧ್ಯಂತರ ಜಾಮೀನು

ಸೋಮವಾರ, 31 ಅಕ್ಟೋಬರ್ 2011 (11:10 IST)
PR
ಕೆಐಎಡಿಬಿ ಭೂ ಹಗರಣ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿ ನ್ಯಾಯಾಂಗ ಬಂಧನದಲ್ಲಿದ್ದು, ಕ್ಯಾನ್ಸರ್ ರೋಗದ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡುಗೆ ಕೊನೆಗೂ ಹೈಕೋರ್ಟ್ ಏಕಸದಸ್ಯ ಪೀಠ ಸೋಮವಾರ 3 ತಿಂಗಳ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರು ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದು ಅವರಿಗೆ ಮಧ್ಯಂತರ ಜಾಮೀನು ನೀಡಬೇಕೆಂದು ಕೋರಿ ಕಟ್ಟಾ ಪರ ವಕೀಲರು ಹೈಕೋರ್ಟ್ ಮೊರೆ ಹೋಗಿದ್ದರು. ಇಂದು ಅರ್ಜಿಯ ಅಂತಿಮ ವಿಚಾರಣೆ ಮುಗಿದ ನಿಟ್ಟಿನಲ್ಲಿ ಮಧ್ಯಂತರ ಆದೇಶ ಪ್ರಕಟಿಸಿದೆ.

ಮುಂಬೈಯ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡುಗೆ ಹೆಚ್ಚಿನ ಚಿಕಿತ್ಸೆಗಾಗಿ ಹೈಕೋರ್ಟ್ ಏಕಸದಸ್ಯ ಪೀಠ 5 ಲಕ್ಷ ರೂಪಾಯಿ ಬಾಂಡ್ ಹಾಗೂ ಅಷ್ಟೇ ಮೊತ್ತದ ಶ್ಯೂರಿಟಿ ಆಧಾರದ ಮೇಲೆ ಮೂರು ತಿಂಗಳ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಮಧ್ಯಂತರ ಜಾಮೀನಿಗಾಗಿ ಸಾಕಷ್ಟು ಕಸರತ್ತು ನಡೆಸಿದ್ದ ಕಟ್ಟಾ ಪರ ವಕೀಲರು ಕೊನೆಗೂ ಹೈಕೋರ್ಟ್‌ನಲ್ಲಿ ಮಧ್ಯಂತರ ಜಾಮೀನು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಅಲ್ಲದೇ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರನ್ನು ಲಂಡನ್‌ನ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಕರೆದೊಯ್ಯಲಿದ್ದಾರೆ. ಮೂರು ತಿಂಗಳ ನಂತರವೂ ಆರೋಗ್ಯ ಸುಧಾರಿಸದೇ ಇದ್ದಲ್ಲಿ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರು ಮತ್ತೆ ಲೋಕಾಯುಕ್ತ ವಿಶೇಷ ಕೋರ್ಟ್‌ನಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಬೇಕು. ಲೋಕಾಯುಕ್ತ ವಿಶೇಷ ನ್ಯಾಯಾಲಯ ಜಾಮೀನು ನೀಡಿದಲ್ಲಿ ಕಟ್ಟಾ ನಿರಾಳರಾಗಬಹುದು, ಜಾಮೀನು ತಿರಸ್ಕರಿಸಿದಲ್ಲಿ ನ್ಯಾಯಾಂಗ ಬಂಧನ ಮುಂದುವರಿಯಲಿದೆ.

ಇಟಾಸ್ಕಾ ಸಾಫ್ಟ್‌ವೇರ್ ಡೆವಲಪ್‌ಮೆಂಟ್ ಕಂಪನಿಗೆ 325 ಎಕರೆ ಜಮೀನು ಮಂಜೂರು ಮಾಡಲು 87 ಕೋಟಿ ರೂಪಾಯಿ ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಹಾಗೂ ಅವರ ಪುತ್ರ, ಪಾಲಿಕೆ ಸದಸ್ಯ ಕಟ್ಟಾ ಜಗದೀಶ್ ವಿರುದ್ಧ ಲೋಕಾಯುಕ್ತ ಪೊಲೀಸರು ಕಳೆದ ಡಿಸೆಂಬರ್ ತಿಂಗಳಿನಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದರು.

ವೆಬ್ದುನಿಯಾವನ್ನು ಓದಿ