ಚುನಾವಣೆಗೆ ಪೊಲೀಸರ ಕಟ್ಟುನಿಟ್ಟಿನ ಕ್ರಮ

ಮಂಗಳವಾರ, 6 ಮೇ 2008 (19:33 IST)
ರಾಜ್ಯದಲ್ಲಿ ನಡೆಯಲಿರುವ ಮೂರು ಹಂತದ ವಿಧಾನ ಸಭಾ ಚುನಾವಣೆಗಳನ್ನು ಶಾಂತಿ ಮತ್ತು ಸುವ್ಯವಸ್ಥೆಯಿಂದ ನಡೆಸಲು ಚುನಾವಣಾ ಆಯೋಗ ತೀವ್ರತರವಾದ ಕ್ರಮಗಳನ್ನು ಜಾರಿಗೊಳಿಸುತ್ತಿರುವ ಬೆನ್ನಲ್ಲೆ, ಪೊಲೀಸರು ಬಿಗಿ ಎಲ್ಲ ರೀತಿಯಲ್ಲೂ ಸಜ್ಜಾಗುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸುಮಾರು 10 ಸಾವಿರ ರೌಡಿಗಳನ್ನು ಗುರುತಿಸಿರುವ ಪೊಲೀಸರು, ಇವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಾಗಿದೆ ಎಂದು ಪೊಲೀಸ್ ಮಹಾ ನಿರ್ದೇಶಕ ಶ್ರೀ ಕುಮಾರ್ ತಿಳಿಸಿದ್ದಾರೆ.

ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಚೇರಿಯಲ್ಲಿ ಇಂದು(ಮಂಗಳವಾರ) ಹಿರಿಯ ಅಧಿಕಾರಿಗಳೊಂದಿಗೆ ನಡೆದ ಸುದೀರ್ಘ ಮಾತುಕತೆಯ ಬಳಿಕ ಶ್ರೀ ಕುಮಾರ್ ಅವರು ಈ ವಿಷಯವನ್ನು ಪ್ರಕಟಿಸಿದರು.

ಇದಲ್ಲದೆ, ಈವರೆಗೆ ಸುಮಾರು 1.3ಕೋಟಿ ಮೌಲ್ಯದ ಮದ್ಯ ವಶಪಡಿಸಿಕೊಳ್ಳಲಾಗಿದೆ. ನೆರೆರಾಜ್ಯಗಳಿಂದ ಮದ್ಯ ಸರಬರಾಜು ಆಗುವುದನ್ನು ತಡೆಯಲು ಚೆಕ್ ಪೋಸ್ಟ್‌ಗಳಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದೆ ಎಂದ ಅವರು, ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ನಕ್ಸಲ್ ನಿಗ್ರಹ ಪಡೆಗಳನ್ನು ಭದ್ರತೆಗಳಿಗಾಗಿ ನಿಯೋಜಿಸಲಾಗಿದೆ ಎಂದು ತಿಳಿಸಿದರು.

ಕಳೆದ ಚುನಾವಣೆಯಲ್ಲಿ ವೀರಪ್ಪನ್ ವಾಸವಾಗಿದ್ದ ಪ್ರದೇಶಗಳನ್ನು ಅತಿಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿತ್ತು. ಆದರೆ ಈಗ ಅವುಗಳು ಸಾಮಾನ್ಯ ಮತಗಟ್ಟೆಗಳಾಗಿವೆ ಎಂದು ಅವರು ತಿಳಿಸಿದರು.

ವೆಬ್ದುನಿಯಾವನ್ನು ಓದಿ