ಲೋಕಾಯುಕ್ತ ಯಾರಾಗ್ಬೇಕು?; ಸರ್ಕಾರ v/s ಗವರ್ನರ್

ಶನಿವಾರ, 31 ಡಿಸೆಂಬರ್ 2011 (17:22 IST)
PR
ಲೋಕಾಯುಕ್ತ ಸ್ಥಾನಕ್ಕೆ ನ್ಯಾಯಮೂರ್ತಿ ಬನ್ನೂರು ಮಠರವರ ಬದಲಿಗೆ ಅರ್ಹರನ್ನು ನೇಮಿಸುವಂತೆ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರು ಪಟ್ಟು ಹಿಡಿದಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಲೋಕಾಯುಕ್ತ ಸ್ಥಾನಕ್ಕೆ ನ್ಯಾಯಮೂರ್ತಿ ಬನ್ನೂರು ಮಠ ಅವರನ್ನೇ ನೇಮಕ ಮಾಡಲು ಮುಂದಾಗಿದೆ.

ತಾಜಾ ಸುದ್ದಿ, ಕನ್ನಡ ಸುದ್ದಿ, ಕನ್ನಡ ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಲೋಕಾಯುಕ್ತ ಸ್ಥಾನಕ್ಕೆ ಅರ್ಹರನ್ನು ನೇಮಿಸುವಂತೆ ಪಟ್ಟು ಹಿಡಿದಿರುವ ರಾಜ್ಯಪಾಲರನ್ನು ಮನವೊಲಿಸಿ ನ್ಯಾಯಮೂರ್ತಿ ಬನ್ನೂರು ಮಠ ಅವರನ್ನೇ ಲೋಕಾಯುಕ್ತ ಸ್ಥಾನಕ್ಕೆ ನೇಮಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ತಿಳಿಸಿದ್ದಾರೆ.

ಗೃಹಕಚೇರಿ ಕೃಷ್ಣಾದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತ ಸ್ಥಾನಕ್ಕೆ ನ್ಯಾಯಮೂರ್ತಿ ಬನ್ನೂರು ಮಠ ಅವರೇ ಅಂತಿಮ ಆಯ್ಕೆಯಾಗಿದ್ದು, ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಹೇಳಿದರು.

ಬರುವ ಜನವರಿಯಲ್ಲಿ 10 ದಿನಗಳ ವಿಧಾನಮಂಡಲದ ಅಧಿವೇಶನ ಕರೆಯಲಾಗುವುದು. ಈ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಶನಿವಾರ ಬೆಳಿಗ್ಗೆ ಭೇಟಿ ಮಾಡಿ ಚರ್ಚೆ ನಡೆಸಿದ್ದೇನೆ ಎಂದರು.

ಬಿಜೆಪಿ ರಾಜ್ಯಾಧ್ಯಕ್ಷ ಈಶ್ವರಪ್ಪ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರೊಂದಿಗೂ ಅಧಿವೇಶನದ ಸಂಬಂಧ ಚರ್ಚಿಸಲಾಗುವುದು. ಅಧಿವೇಶನದಲ್ಲಿ ಯಾವ ಯಾವ ವಿಷಯಗಳನ್ನು ಕೈಗೆತ್ತಿಕೊಳ್ಳಬೇಕು ಎನ್ನುವುದನ್ನು ಇಬ್ಬರು ಮುಖಂಡರೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದು ತಿಳಿಸಿದರು.

ಮಾರ್ಚ್‌ನಲ್ಲಿ ಬಜೆಟ್ ಮಂಡನೆ ಮಾಡಲಿದ್ದು, ಬೆಳಗಾವಿಯಲ್ಲಿ ನಿರ್ಮಿಸುತ್ತಿರುವ ಸುವರ್ಣ ವಿಧಾನಸೌಧ ಕಟ್ಟಡ ನಿರ್ಮಾಣ ಪೂರ್ಣಗೊಳ್ಳುವವರೆಗೆ ಬೆಳಗಾವಿಯಲ್ಲಿ ಅಧಿವೇಶನ ನಡೆಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ವೆಬ್ದುನಿಯಾವನ್ನು ಓದಿ