ಶೆಟ್ಟರ್ ರಾಜೀನಾಮೆಗೆ ಜಿ. ಪರಮೇಶ್ವರ್ ಒತ್ತಾಯ

ಗುರುವಾರ, 28 ಫೆಬ್ರವರಿ 2013 (09:39 IST)
PR
PR
ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರದ ಸಚಿವರು, ಶಾಸಕರು ಸರಣಿಯಾಗಿ ರಾಜೀನಾಮೆ ನೀಡುತ್ತಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದ್ದು, ನೈತಿಕ ಹೊಣೆ ಹೊತ್ತು ಜಗದೀಶ್ ಶೆಟ್ಟರ್ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಒತ್ತಾಯಿಸಿದ್ದಾರೆ.

ಆಲಮಟ್ಟಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇನ್ನೂ ಹಲವು ಸಚಿವ, ಶಾಸಕರು ಬಿಜೆಪಿಗೆ ರಾಜೀನಾಮೆ ನೀಡಲಿದ್ದಾರೆ. ಇದರಿಂದಾಗಿ ಆಡಳಿತದ ಮೇಲೆ ಪರಿಣಾಮ ಬೀರಿದ್ದು, ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ ಎಂದು ಆರೋಪಿಸಿದರು.

ಬಿಜೆಪಿ ಸೇರಿದಂತೆ ವಿವಿಧ ಪಕ್ಷಗಳ ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ ತೋರುತ್ತಿದ್ದು, ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಿಸಲಿದೆ ಎಂದು ಹೇಳಿದ ಪರಮೇಶ್ವರ್, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಲು ಆಕಾಂಕ್ಷಿಗಳ ಸಂಖ್ಯೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ಟಿಕೆಟ್‌ಗೆ ಅಭ್ಯರ್ಥಿಗಳು ಸಲ್ಲಿಸಿದ ಅರ್ಜಿಗಳ ಪರಿಶೀಲನೆಗೆ ಮಾ.16 ರಂದು ಬೆಂಗಳೂರಿನಲ್ಲಿ ಕೆಪಿಸಿಸಿ ಸಭೆ ನಡೆಯಲಿದೆ ಎಂದು ತಿಳಿಸಿದರು.

ಈ ಸಭೆಯಲ್ಲಿ ಆಕಾಂಕ್ಷಿತ ಅಭ್ಯರ್ಥಿಗಳ ಪಟ್ಟಿಯನ್ನು ತಯಾರಿಸಲಾಗುವುದು ಮತ್ತು ಎರಡಕ್ಕಿಂತ ಹೆಚ್ಚು ಬಾರಿ ಪಕ್ಷದ ಟಿಕೆಟ್‌ ಪಡೆದು 15000 ಮತಗಳ ಅಂತರದಿಂದ ಸೋತ ಅಭ್ಯರ್ಥಿಗಳ ಪಟ್ಟಿಯನ್ನೂ ತಯಾರಿಸಿ ಪಕ್ಷದ ಹೈಕಮಾಂಡ್‌ಗೆ ಕಳಿಸಲಾಗುವುದು. ಅಂತಿಮವಾಗಿ ಅಭ್ಯರ್ಥಿಗಳ ಆಯ್ಕೆಯನ್ನು ಹೈಕಮಾಂಡ್‌ ಮಾಡಲಿದೆ. ಈ ಹಿಂದೆ ಸೋತವರಿಗೆ ಟಿಕೆಟ್‌ ನೀಡುವುದು, ಬಿಡುವುದು ಹೈಕಮಾಂಡ್‌ಗೆ ಬಿಟ್ಟ ವಿಷಯ ಎಂದು ಸ್ಪಷ್ಟಪಡಿಸಿದರು.

ವೆಬ್ದುನಿಯಾವನ್ನು ಓದಿ