ಕಲ್ಯಾಣ ಕರ್ನಾಟಕಕ್ಕೆ 5030 ಕೋಟಿ ರೂ. ಅನುದಾನಕ್ಕೆ ಮನವಿ:ಬಸವರಾಜ ಬೊಮ್ಮಾಯಿ
ಮಂಗಳವಾರ, 8 ಫೆಬ್ರವರಿ 2022 (20:36 IST)
ಕಲ್ಯಾಣ ಕರ್ನಾಟಕ ಪ್ರದೇಶದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಕೇಂದ್ರ ಪುರಸ್ಕೃತ ಯೋಜನೆಗಳಡಿ ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗಕ್ಕೆ 5030 ಕೋಟಿ ರೂ. ಅನುದಾನ ಒದಗಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಮಾಡಿದರು.
ಇತ್ತೀಚೆಗೆ ತಿರುಪತಿಯಲ್ಲಿ ನಡೆದ ದಕ್ಷಿಣ ವಲಯ ಮಂಡಳಿ ಸಭೆಯಲ್ಲಿ ಚರ್ಚಿಸಿದಂತೆ, ಆಂಧ್ರ ಪ್ರದೇಶ ರಾಜ್ಯವು ತನ್ನ ಹಿಂದುಳಿದ ಜಿಲ್ಲೆಗಳ ಅಭಿವೃದ್ಧಿಗೆ ವಿಶೇಷ ಅನುದಾನ ಒದಗಿಸುವಂತೆ ಮನವಿ ಮಾಡಿತ್ತು. ಅಂತೆಯೇ ಕರ್ನಾಟಕ ರಾಜ್ಯದಲ್ಲಿಯೂ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳು ದೇಶದಲ್ಲಿಯೇ ಹಿಂದುಳಿದ ಜಿಲ್ಲೆಗಳ ಸಾಲಿನಲ್ಲಿ ಸೇರಿವೆ ಎಂದು ಮುಖ್ಯಮಂತ್ರಿ ತಿಳಿಸಿದರು.
371(ಜೆ) ವಿಧಿಯನ್ವಯ ಸಂವಿಧಾನ ತಿದ್ದುಪಡಿಯ ಮೂಲಕ ಈ ಭಾಗಕ್ಕೆ ವಿಶೇಷ ಸ್ಥಾನ ನೀಡಲಾಗಿದ್ದು, ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಒದಗಿಸಲಾಗಿದೆ. ಆದರೆ ಈ ಭಾಗವು ಅಭಿವೃದ್ಧಿಯಲ್ಲಿ ಬಹಳ ಹಿಂದುಳಿದಿರುವುದರಿಂದ ವಿಶೇಷ ಗಮನ ನೀಡುವ ಅಗತ್ಯವಿದೆ. ನೀತಿ ಆಯೋಗದ ಬಹು ಆಯಾಮದ ಬಡತನ ಸೂಚ್ಯಂಕದಲ್ಲಿಯೂ ಈ ಜಿಲ್ಲೆಗಳು ಹಿಂದುಳಿದಿರುವುದರಿಂದ ಕಲ್ಯಾಣ ಕರ್ನಾಟಕ ಭಾಗಕ್ಕೆ ವಿವಿಧ ಕೇಂದ್ರ ಪುರಸ್ಕೃತ ಯೋಜನೆಗಳಡಿ 5030 ಕೋಟಿ ರೂ. ಅನುದಾನ ಒದಗಿಸಬೇಕೆಂದು ಮುಖ್ಯಮಂತ್ರಿ ಮನವಿ ಮಾಡಿದರು.
ಜಿ.ಎಸ್.ಟಿ. ಪರಿಹಾರ ಅವಧಿ ವಿಸ್ತರಣೆಗೆ ಮುಖ್ಯಮಂತ್ರಿ ಮನವಿ.
ರಾಜ್ಯಗಳಿಗೆ ಕೇಂದ್ರ ಸರ್ಕಾರ ನೀಡುವ ಜಿಎಸ್‌ಟಿ ಪರಿಹಾರವನ್ನು 2024-25ರ ವರೆಗೆ ವಿಸ್ತರಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಮನವಿ ಮಾಡಿದರು.
ಎರಡು ದಿನಗಳ ಹೊಸದಿಲ್ಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ, ಇಂದು ಹಣಕಾಸು ಸಚಿವರನ್ನು ಭೇಟಿಯಾಗಿ, 2022ರ ಮಾರ್ಚ್‌ಗೆ ಜಿ.ಎಸ್.ಟಿ. ಪರಿಹಾರದ ಅವಧಿ ಮುಕ್ತಾಯಗೊಳ್ಳಲಿದೆ. ಆದರೆ ಕೋವಿಡ್ 19 ರಿಂದ ರಾಜ್ಯ ಸರ್ಕಾರಗಳ ಸಂಪನ್ಮೂಲ ಕ್ರೋಢೀಕರಿಸಲು ಸಮಸ್ಯೆ ಎದುರಿಸುತ್ತಿರುವ ಕೇಂದ್ರ ಸರ್ಕಾರವು ಜಿ.ಎಸ್.ಟಿ. ಪರಿಹಾರದ ಅವಧಿ ವಿಸ್ತರಿಸುವ ಮೂಲಕ ರಾಜ್ಯ ಸರ್ಕಾರಗಳ ಸಂಕಷ್ಟ ಪರಿಹರಿಸುವಂತೆ ಮನವಿ ಮಾಡಿದರು.
ಕಳೆದ ಎರಡು ವರ್ಷಗಳಲ್ಲಿ ಸಾಲದ ಮೂಲಕ ರಾಜ್ಯಗಳಿಗೆ ಜಿ.ಎಸ್.ಟಿ. ಪರಿಹಾರ ಒದಗಿಸಿದಂತೆ, ಮುಂದಿನ ಮೂರು ವರ್ಷಗಳೂ ಇದೇ ಕ್ರಮ ಅನುಸರಿಸುವಂತೆ ಹಾಗೂ ಜಿ.ಎಸ್.ಟಿ. ಸೆಸ್ ಸಂಗ್ರಹದಿಂದ ಈ ಸಾಲ ಮರುಪಾವತಿ ಮಾಡಬಹುದು ಎಂದು ಮುಖ್ಯಮಂತ್ರಿ ಪ್ರಸ್ತಾಪಿಸಿದ್ದಾರೆ.