ಬೆಂಗಳೂರು-ಏಕಗವಾಕ್ಷಿ ಅನುಮೋದನಾ ಸಮಿತಿಯು ಹಸಿರು ನಿಶಾನೆ ನೀಡಿರುವ ಈ ಯೋಜನೆಗಳ ಪೈಕಿ 24 ಯೋಜನೆಗಳು ಮಾತ್ರ ಬೆಂಗಳೂರು ಜಿಲ್ಲೆಯಲ್ಲಿದ್ದು, ಉಳಿದ 217 ಯೋಜನೆಗಳು ಹೊರಗಿನ ಜಿಲ್ಲೆಗಳಲ್ಲಿವೆ. ಬೆಂಗಳೂರು ಜಿಲ್ಲೆಯಲ್ಲಿ 21,537 ಕೋಟಿ ರೂ. ಹೂಡಿಕೆ ಆಗುತ್ತಿದ್ದು, 19,243 ಉದ್ಯೋಗ ಸೃಷ್ಟಿ ಆಗಲಿವೆ. ಉಳಿದ ಜಿಲ್ಲೆಗಳಲ್ಲಿ 28,488 ಕೋಟಿ ರೂ. ಬಂಡವಾಳ ಹೂಡಿಕೆ ಆಗುತ್ತಿದ್ದು, 38,808 ಮಂದಿಗೆ ಉದ್ಯೋಗ ಸಿಗಲಿವೆ ಎಂದು ಅವರು ಅಂಕಿಅಂಶಗಳ ಸಮೇತ ವಿವರಿಸಿದರು.
ಬೆಂಗಳೂರನ್ನು ಹೊರತುಪಡಿಸಿ ರಾಜ್ಯದ ಮಿಕ್ಕ ಭಾಗಗಳಲ್ಲಿ ಉದ್ದಿಮೆಗಳು ನೆಲೆಯೂರಿ, ಉದ್ಯೋಗ ಸೃಷ್ಟಿಯಾಗುವಂತೆ ಮಾಡಲು ಸರಕಾರವು ಬಿಯಾಂಡ್ ಬೆಂಗಳೂರು ಉಪಕ್ರಮವನ್ನು ಆರಂಭಿಸಿದ್ದು, ವಿವಿಧೆಡೆಗಳಲ್ಲಿ ಕೈಗಾರಿಕಾ ಪ್ರದೇಶಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ. ಇದಕ್ಕಾಗಿ ಕೈಗಾರಿಕಾ ನೀತಿಯಲ್ಲಿ ಹಲವು ಪ್ರೋತ್ಸಾಹಧನ ಮತ್ತು ವಿನಾಯಿತಿಗಳನ್ನು ನೀಡಲಾಗುತ್ತಿದೆ ಎಂದು ಸಚಿವರು ಹೇಳಿದ್ದಾರೆ.
2023-24ನೇ ಸಾಲಿನಲ್ಲಿ ಒಟ್ಟು 241 ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಲಾಗಿದ್ದು, ಇವುಗಳಿಂದ ₹50,025 ಕೋಟಿ ಬಂಡವಾಳ ಹರಿದುಬಂದಿದೆ. ಇವುಗಳ ಮೂಲಕ 58,051 ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.