ವಿವಿಧ ಇಲಾಖೆಗಳು, ಸ್ವಾಯತ್ತ ಸಂಸ್ಥೆಗಳು ಮತ್ತು ವಿಶ್ವ ವಿದ್ಯಾಲಯಗಳಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಿದ್ದು, ಖಾಲಿ ಇರುವ ಬ್ಯಾಕ್‍ಲಾಗ್ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಗತಿ ಪರಿಶೀಲಿಸಿದ ಮುಖ್ಯಮಂತ್ರಿಯವರು, ಖಾಲಿ ಇರುವ ಬ್ಯಾಕ್‍ಲಾಗ್ ಹುದ್ದೆಗಳನ್ನು ಶೀಘ್ರ ಗುರುತಿಸಿ ಭರ್ತಿ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡುವಂತೆ ಅಧಿಕಾರಿಗಳಿಗೆ ಆದೇಶ ಕೊಟ್ಟರು.
4ಸಾವಿರ ಹುದ್ದೆ ಭರ್ತಿಗೆ ಕ್ರಮ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ಖಾಲಿ ಇರುವ ಅಡುಗೆಯವರು ಮತ್ತು ಅಡುಗೆ ಸಹಾಯಕರ ಹುದ್ದೆಗಳ ಭರ್ತಿ ಪ್ರಕ್ರಿಯೆಗೂ ಶೀಘ್ರ ಚಾಲನೆ ಕೊಡಿ. 6,500 ಹುದ್ದೆಗಳು ಖಾಲಿ ಇದ್ದು, 4 ಸಾವಿರ ಹುದ್ದೆಗಳ ಭರ್ತಿಗೆ ಸರ್ಕಾರ ಈಗಾಗಲೇ ಒಪ್ಪಿಗೆ ನೀಡಿದೆ ಎಂದು ಮುಖ್ಯಮಂತ್ರಿಯವರು ತಿಳಿಸಿದರು. ನೇಮಕ ಸಂದರ್ಭದಲ್ಲಿ ಈಗಾಗಲೇ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಸಿಬ್ಬಂದಿಗೂ ಆದ್ಯತೆ ಕೊಡಿ ಎಂದಿದ್ದಾರೆ.