ವಿಜಯಪುರ : ನಡೆದಾಡುವ ದೇವರು ಎಂದೇ ಖ್ಯಾತರಾಗಿರುವ ಜ್ಞಾನಯೋಗಿ ಆಶ್ರಮದ ಸಿದ್ದೇಶ್ವರ ಸ್ವಾಮೀಜಿ ಅವರು ನಿಧನರಾದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಭಕ್ತರ ಆಕ್ರಂದನ ಮುಗಿಲು ಮುಟ್ಟಿದೆ.
ರಾಜ್ಯದ ಪ್ರಮುಖ ಗಣ್ಯರೂ ಕಂಬನಿ ಮಿಡಿಯುವ ಮೂಲಕ ಶ್ರೀಗಳಿಗೆ ಕಣ್ಣೀರ ವಿದಾಯಹೇಳಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂಗಳಾದ ಸಿಎಂ ಬಿ.ಎಸ್.ಯಡಿಯೂರಪ್ಪ, ಹೆಚ್.ಡಿ ಕುಮಾರಸ್ವಾಮಿ, ಸಿದ್ದರಾಮಯ್ಯ, ಕೇಂದ್ರ ಸಚಿವ ಜಿ.ಪರಮೇಶ್ವರ್,
ಶಾಸಕ ಬಸನಗೌಡ ಪಾಟೀಲ ಯತ್ನಾಳ್, ಸಚಿವ ವಿ.ಸೋಮಣ್ಣ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ರಾಜ್ಯಾದ್ಯಂತ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಬಸವರಾಜ ಬೊಮ್ಮಾಯಿ
ವಿಜಯಪುರದ ಜ್ಞಾನ ಯೋಗಾಶ್ರಮದ ಪರಮ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ಲಿಂಗೈಕ್ಯರಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ತಮ್ಮ ಪ್ರವಚನಗಳ ಮೂಲಕ ಮನುಕುಲದ ಉದ್ಧಾರಕ್ಕೆ ಶ್ರಮಿಸಿದ ಶ್ರೀಗಳ ಸೇವೆ ಅಮೋಘ ಹಾಗೂ ಅನನ್ಯವಾದುದು.
ಹೆಚ್.ಡಿ ಕುಮಾರಸ್ವಾಮಿ
ನಮ್ಮ ಪಾಲಿಗೆ ನಡೆದಾಡುವ ಬೆಳಕು, ನಡೆದಾಡುವ ಅರಿವು, ನಡೆದಾಡುವ ದೇವರೇ ಆಗಿದ್ದ ಜ್ಞಾನ ಯೋಗಾಶ್ರಮದ ಜ್ಞಾನಯೋಗಿ ಪರಮಪೂಜ್ಯ ಶ್ರೀ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರು ಶಿವೈಕ್ಯರಾಗಿದ್ದಾರೆ.
ಡಿ.ಕೆ ಶಿವಕುಮಾರ್
ಖ್ಯಾತ ಪ್ರವಚನಕಾರರು ಹಾಗೂ ಜ್ಞಾನಕೋಶವೆಂದೇ ಪ್ರಸಿದ್ಧರಾದ ವಿಜಯಪುರದ ಜ್ಞಾನ ಯೋಗಾಶ್ರಮದ ಪರಮ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರು ಲಿಂಗೈಕ್ಯರಾದ ವಿಚಾರ ಕೇಳಿ ಅತೀವ ನೋವುಂಟಾಯಿತು. ಅವರ ಸಾವು ತುಂಬಲಾಗದ ನಷ್ಟವಾಗಿದೆ. ಅವರ ಆತ್ಮಕ್ಕೆ ಸದ್ಗತಿ ಸಿಗಲಿ, ಅವರ ಅಪಾರ ಭಕ್ತರಿಗೆ ನನ್ನ ಸಂತಾಪಗಳು.
ಆರಗ ಜ್ಞಾನೇಂದ್ರ
ವಿಜಯಪುರದ ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಶ್ರೀಗಳು ನಿಧನರಾದ ಸುದ್ದಿ ತಿಳಿದು ಬಹಳ ದುಃಖ ಉಂಟಾಗಿದೆ. ನಾಡಿನ ಸಾಮಾಜಿಕ ಹಾಗೂ ಅಧ್ಯಾತ್ಮ ವಲಯಕ್ಕೆ ಅವರ ಸೇವೆ ಸ್ಮರಣೀಯವಾದುದು. ಶ್ರೀಗಳ ಆತ್ಮಕ್ಕೆ ಸದ್ಗತಿ ದೊರೆಯಲಿ. ಅನುಯಾಯಿಗಳಿಗೆ ಈ ನೋವು ಭರಿಸುವ ಶಕ್ತಿ ದೊರೆಯಲಿ.