ಡಿಜೆ ಹಳ್ಳಿ ಗಲಭೆ ಮಾದರಿಯಲ್ಲಿ ನಾಗಮಂಗಲದಲ್ಲಿ ಕೃತ್ಯ: ಕುಮಾರಸ್ವಾಮಿ ವಾಗ್ದಾಳಿ

Sampriya

ಶುಕ್ರವಾರ, 13 ಸೆಪ್ಟಂಬರ್ 2024 (14:11 IST)
Photo Courtesy X
ಮಂಡ್ಯ: ವ್ಯವಸ್ಥಿತವಾಗಿ ಗಲಭೆಗಳನ್ನು ಸೃಷ್ಟಿ ಮಾಡುವುದು ಕಾಂಗ್ರೆಸ್‌ಗೆ ಕರತಲಾಮಲಕ. ಹಿಂದಿನಿಂದಲೂ ಅದನ್ನು ಮಾಡಿಕೊಂಡು ಬಂದಿದೆ. ಡಿಜೆ ಹಳ್ಳಿ ಗಲಭೆ ಮಾದರಿಯಲ್ಲಿ ನಾಗಮಂಗಲದಲ್ಲಿ ಕೃತ್ಯ ನಡೆಸಲಾಗಿದೆ ಎಂದು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದರು.

ನಾಗಮಂಗಲದ ಗಲಭೆ ಪೀಡಿತ ಪ್ರದೇಶಗಳಿಗೆ ಇಂದು ಬೆಳಗ್ಗೆ ಭೇಟಿ ನೀಡಿ ದುಷ್ಕರ್ಮಿಗಳ ದಾಳಿಗೆ ತುತ್ತಾದ ಅಂಗಡಿ, ಮಳಿಗೆಗಳನ್ನು ವೀಕ್ಷಿಸಿದ ನಂತರ ಸಚಿವರು ಮಾಧ್ಯಮಗಳ ಜತೆ ಮಾತನಾಡಿದರು.

ಗಣೇಶ ಮೆರವಣಿಗೆ ವೇಳೆ ಪಟ್ಟಣದಲ್ಲಿ ನಡೆದ ಗಲಭೆ ಪೂರ್ವಯೋಜಿತ ಕೃತ್ಯ, ವ್ಯವಸ್ಥಿತ ಪಿತೂರಿ. ಅಷ್ಟೇ ಅಲ್ಲ; ಇದು ಕಾಂಗ್ರೆಸ್ ಪ್ರಾಯೋಜಿತ ಗಲಭೆ ಎಂದು ವಾಗ್ದಾಳಿ ನಡೆಸಿದರು.

ಇಂಥ ಗಲಾಟೆಗಳನ್ನು ಮಾಡಿಸುವುದರಲ್ಲಿ ಕಾಂಗ್ರೆಸ್ ಎಕ್ಸ್‌ಪರ್ಟ್. ನಾಗಮಂಗಲದಲ್ಲಿಯೂ ಕಾಂಗ್ರೆಸ್ ಚಿತಾವಣೆಯ ಬಗ್ಗೆ ಅನುಮಾನ ಇದೆ. ಈಗ ಚನ್ನಪಟ್ಟಣದಲ್ಲಿ ಉಪ ಚುನಾವಣೆ ಬರುತ್ತಿದೆ. ಬೇರೆ ಬೇರೆ ಘಟನೆಗಳು ಕೂಡ ನಡೆಯುತ್ತಿವೆ. ಹೀಗಾಗಿ ಒಂದು ಸಮುದಾಯದ ಓಲೈಕೆ ಮಾಡಲು ಈ ಸಂಚು ರೂಪಿಸಿರಬಹುದು ಎಂದು ಅವರು ಶಂಕೆ ವ್ಯಕ್ತಪಡಿಸಿದರು.

ಮೆರವಣಿಗೆ ಹೊರಟಿದ್ದವರ ಮೇಲೆ ಕಲ್ಲು, ಚಪ್ಪಲಿ, ಪೆಟ್ರೋಲ್ ಬಾಂಬ್‌ಗಳನ್ನು ಎಸೆಯಲಾಗಿದೆ. ಕೇವಲ ಹತ್ತು ನಿಮಿಷದಲ್ಲಿ ಅಷ್ಟು ಪ್ರಮಾಣದ ಕಲ್ಲು, ಚಪ್ಪಲಿ, ಕಬ್ಬಿಣದ ಪೈಪ್‌ಗಳು, ಪೆಟ್ರೋಲ್ ಬಾಂಬ್‌ಗಳು ಎಲ್ಲಿಂದ ಬಂದವು? ಹತ್ತೇ ನಿಮಿಷದಲ್ಲಿ ಇವನ್ನೆಲ್ಲಾ ಸಂಗ್ರಹ ಮಾಡಿಕೊಳ್ಳಲು ಸಾಧ್ಯವೇ? ಇಡೀ ಗಲಭೆಯ ರೀತಿಯನ್ನು ನೋಡಿದರೆ ಇದರ ಹಿಂದೆ ದೊಡ್ಡ ಪಿತೂರಿ ಅಡಗಿರುವಂತೆ ತೋರುತ್ತದೆ ಎಂದು ಆರೋಪಿಸಿದರು

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ