ಬೆಂಗಳೂರು: ಧರ್ಮಸ್ಥಳ ಮೂಲದ ವಿದ್ಯಾರ್ಥಿ ಆಕಾಂಕ್ಷ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಮಗ್ರ ತನಿಖೆ ನಡೆಸುವಂತೆ ಪಂಜಾಬ್ ಸರ್ಕಾರವನ್ನು ಆಗ್ರಹಿಸಿದ್ದೇನೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಆಕಾಂಕ್ಷ ಪಂಜಾಬ್‌ನಲ್ಲಿ ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿ. ಇದೊಂದು ಅಸಹಜ ಸಾವು ಎಂಬುದು ಮೇಲ್ನೋಟಕ್ಕೆ ಎದ್ದು ಕಾಣುತ್ತದೆ. ಕಿರುಕುಳದಿಂದ ಮೃತಪಟ್ಟಿರುವುದಾಗಿ ಅವರು ವಿದ್ಯಾರ್ಥಿನಿಯ ಕುಟುಂಬದವರು ಆರೋಪಿಸಿದ್ದಾರೆ. ಆಕಾಂಕ್ಷ ಸಾವಿಗೆ ನ್ಯಾಯ ಒದಗಿಸುವಂತೆ ಪಂಜಾಬ್ ಸರ್ಕಾರಕ್ಕೆ ಒತ್ತಾಯಿಸಲಾಗಿದೆ ಎಂದು ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ್ದಾರೆ.
ಪ್ರಕರಣ ಕುರಿತು ರಾಜ್ಯ ಮುಖ್ಯ ಕಾರ್ಯದರ್ಶಿ ಅವರೊಂದಿಗೆ ಚರ್ಚೆ ನಡೆಸಿದ್ದೇನೆ. ಪಂಜಾಬ್ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಆಕಾಂಕ್ಷ ಮೃತದೇಹವನ್ನು ಕುಟುಂಬ ವರ್ಗದವರಿಗೆ ಹಸ್ತಾಂತರಿಸುವ ನಿಟ್ಟಿನಲ್ಲಿ ಕ್ರಮ ವಹಿಸುವಂತೆ ಸೂಚನೆ ನೀಡಿದ್ದೇನೆ ಎಂದಿದ್ದಾರೆ.
ಪಂಜಾಬ್ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರೊಂದಿಗೆ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಗಳು ಚರ್ಚೆ ನಡೆಸಿದ್ದು, ಪಂಜಾಬ್‌ನ ಜಲಂಧರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಕಾಂಕ್ಷ ಅವರ ಕುಟುಂಬದ ಬೆಂಬಲಕ್ಕೆ ರಾಜ್ಯ ಸರ್ಕಾರ ನಿಲ್ಲಲಿದ್ದು, ಸರ್ಕಾರದಿಂದ ಅಗತ್ಯ ಸಹಕಾರ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ.