ಬೆಂಗಳೂರು : ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ 4ನೇ ಹಂತದ ಯೋಜನೆಯಡಿ ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ತುಮಕೂರು ಸೇರಿದಂತೆ ಒಂಬತ್ತು ಜಿಲ್ಲೆಗಳ 503.25 ಕೋಟಿ ರು.
ಮೊತ್ತದ ಕಾಮಗಾರಿಗಳಿಗೆ ಪೌರಾಡಳಿತ ಇಲಾಖೆ ಶುಕ್ರವಾರ ಅನುಮೋದನೆ ನೀಡಿದೆ. ತನ್ಮೂಲಕ ಈ ಯೋಜನೆಯಡಿ ಇದುವರೆಗೆ ರಾಜ್ಯದ 291 ನಗರ ಸ್ಥಳೀಯ ಸಂಸ್ಥೆಗಳ ಒಟ್ಟು 2993 ಕೋಟಿ ರು.ಗಳ ಕಾಮಗಾರಿಗಳಿಗೆ ಅನುಮೋದನೆ ದೊರೆತಂತಾಗಿದೆ.
ಅಮೃತ ನಗರೋತ್ಥಾನ 4ನೇ ಹಂತದ ಯೋಜನೆಯ 3885 ಕೋಟಿ ರು. ಮೊತ್ತದ ಕಾಮಗಾರಿಗಳಿಗೆ ಕಳೆದ ಜನವರಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರಕಿತ್ತು.
ಅದಕ್ಕೆ ಪೂರಕವಾಗಿ ಅನುಮೋದನೆಗಾಗಿ ಜಿಲ್ಲಾಧಿಕಾರಿಗಳ ಮೂಲಕ ಕ್ರಿಯಾ ಯೋಜನೆಗಳು ಸಲ್ಲಿಕೆಯಾಗಿದ್ದವು. ಅವುಗಳಿಗೆ ಪೌರಾಡಳಿತ ಇಲಾಖೆಯು ಹಂತ ಹಂತವಾಗಿ ಈ ಯೋಜನೆಗಳ ಕಾಮಗಾರಿಗಳಿಗೆ ಕ್ರಿಯಾಯೋಜನೆ ನೀಡುತ್ತಾ ಬರುತ್ತಿದೆ.
ಪೌರಾಡಳಿತ, ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವ ಎಂ.ಟಿ.ಬಿ.ನಾಗರಾಜು ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಶುಕ್ರವಾರ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ 4ನೇ ಹಂತದ ಯೋಜನೆಗಳ ರಾಜ್ಯ ಮಟ್ಟದ ಸಮಿತಿ ಸಭೆ ನಡೆಯಿತು.