ಗುಂಡೂರಾವ್​ ಮನೆಯಲ್ಲಿ ಅರ್ಧ ಪಾಕಿಸ್ತಾನ ಹೇಳಿಕೆ: ಯತ್ನಾಳ್ ವಿರುದ್ಧ ಜಾಮೀನು ರಹಿತ ವಾರೆಂಟ್

Sampriya

ಗುರುವಾರ, 17 ಅಕ್ಟೋಬರ್ 2024 (16:58 IST)
Photo Courtesy X
ಬೆಂಗಳೂರು: ಸಚಿವ ದಿನೇಶ್ ಗುಂಡೂರಾವ್​ ಅವರ ಮನೆಯಲ್ಲಿ ಅರ್ಧ ಪಾಕಿಸ್ತಾನ​ ಇದೆ ಎಂದು ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.

ಬಿಜೆಪಿ ಶಾಸಕ ಯತ್ನಾಳ್ ಬುಧವಾರ ನ್ಯಾಯಾಲಯಕ್ಕೆ ಹಾಜರಾಗಬೇಕಿತ್ತು. ಆದರೆ, ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಏಕಸದಸ್ಯ ಪೀಠವು ಶಾಸಕರ ವಿರುದ್ಧ ಎನ್‌ಬಿಡಬ್ಲ್ಯೂ ಹೊರಡಿಸಿ ಅರ್ಜಿ ವಿಚಾರಣೆಯನ್ನು ಅಕ್ಟೋಬರ್ 28ಕ್ಕೆ ಮುಂದೂಡಿದೆ.

ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಬಗ್ಗೆ ಏಪ್ರಿಲ್ 6 ರಂದು ವಿಜಯಪುರ ಜಿಲ್ಲಾ ಬಿಜೆಪಿ ಕಚೇರಿ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದ ಯತ್ನಾಳ್, ಸಚಿವ ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ. ದೇಶ ವಿರೋಧಿ ಹೇಳಿಕೆ ನೀಡುವುದು ಅವರ ಚಟವಾಗಿದೆ ಎಂದು ಹೇಳಿದ್ದರು. ಈ ಹೇಳಿಕೆ ವಿರುದ್ಧ ದಿನೇಶ್ ಗುಂಡೂರಾವ್​ ಅವರ ಪತ್ನಿ ಟಬು ರಾವ್ ಅವರು ಪೊಲೀಸರಿಗೆ ದೂರು ನೀಡಿದ್ದರು.

ನನ್ನ ಪತಿ ದಿನೇಶ್ ಗುಂಡೂರಾವ್ ಮತ್ತು ನಮ್ಮ ಕುಟುಂಬದ ಬಗ್ಗೆ ಯತ್ನಾಳ್ ಅವರು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದರು. ಅಲ್ಲದೆ, ಬಿಜೆಪಿಯ ರಾಜ್ಯ ಘಟಕದ ಸಾಮಾಜಿಕ ಮಾಧ್ಯಮ ಸೆಲ್ ವಿರುದ್ಧವೂ ಕರ್ನಾಟಕ ರಾಜ್ಯ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿ, ಮಾನನಷ್ಟ ಮೊಕದ್ದಮೆಯನ್ನೂ ಹೂಡಿದ್ದರು.

ಈ ಖಾಸಗಿ ದೂರನ್ನು ಆಗಸ್ಟ್‌ 29 ರಂದು ಪುರಸ್ಕರಿಸಿದ್ದ ಕೋರ್ಟ್‌, ಅ.16 ರಂದು ವಿಚಾರಣೆಗೆ ಖುದ್ದು ಹಾಜರಾಗುವಂತೆ ಯತ್ನಾಳ್​ಗೆ ಸಮನ್ಸ್‌ ಜಾರಿಗೊಳಿಸಿತ್ತು. ಆದರೆ, ಯತ್ನಾಳ್ ಇಂದು ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ