ರಾಜ್ಯದ ಏಳು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

ಭಾನುವಾರ, 18 ಜುಲೈ 2021 (19:39 IST)
ಬೆಂಗಳೂರು: ಪೂರ್ವ ಅರಬ್ಬೀಸಮುದ್ರದ ಕರ್ನಾಟಕದ ಕರಾವಳಿಯಲ್ಲಿ ಕಡಿಮೆ ಒತ್ತಡವಿರುವ ವಿಸ್ತರಿಸಿದ ಪ್ರದೇಶವಿದೆ. ಜುಲೈ 21ರಂದು ಬಂಗಾಳ ಉಪಸಾಗರದ ವಾಯುವ್ಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗುವ ಹೆಚ್ಚಿನ ಸಾಧ್ಯತೆಯಿದೆ. ಇದರ ಪ್ರಭಾವದಿಂದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಜುಲೈ 18ರಿಂದ 22ರವರೆಗೆ ಗುಡುಗಿನಿಂದ ಕೂಡಿದ ಭಾರೀ ಮಳೆಯಾಗುವ ಸಾಧ್ಯತೆಯಿದೆ. 
 
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳ ಕೆಲವೆಡೆ ಗುಡುಗಿನಿಂದ ಕೂಡಿದ ಭಾರಿ ಹಾಗೂ ಅತಿಭಾರಿ ಮಳೆ ನಿರೀಕ್ಷಿಸಲಾಗಿದ್ದು, ಕೆಲವೊಮ್ಮೆ ಅತ್ಯಂತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಜು.18 ಮತ್ತು 19ರಂದು ರೆಡ್ ಅಲರ್ಟ್ ಹಾಗೂ ಜುಲೈ 20 ರಿಂದ 22ರವರೆಗೆ ಆರೆಂಜ್ ಘೊಷಿಸಲಾಗಿದೆ. 
 
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬೀದರ್, ಕಲಬುರ್ಗಿ, ಯಾದಗಿರಿ, ವಿಜಾಪುರ, ಬಾಗಲಕೋಟೆ, ಕೊಪ್ಪಳ ಹಾಗೂ ದಕ್ಷಿಣ ಒಳನಾಡಿನ ದಾವಣಗೆರೆ, ಚಿತ್ರದುರ್ಗ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ಜುಲೈ 18, 19ರಂದು ಆರೆಂಜ್ ಅಲರ್ಟ್, ಜುಲೈ 21 ಮತ್ತು 22ರಂದು ಯೆಲ್ಲೋ ಅಲರ್ಟ್ ಕೊಡಲಾಗಿದೆ ಎಂದು ಹವಾಮಾನ ಇಲಾಖೆ ಪ್ರಾಾದೇಶಿಕ ನಿರ್ದೆಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾಾರೆ.
 
ರಾಜ್ಯಾದ್ಯಂತ ಮುಂಗಾರು ಚುರುಕು:
ರಾಜ್ಯಾದ್ಯಂತ ಭಾನುವಾರ ನೈರುತ್ಯ ಮುಂಗಾರು ಚುರುಕಾಗಿದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ 21 ಸೆಂ.ಮೀ, ದಾವಣಗೆರೆಯ ಉಚ್ಚಂಗಿದುರ್ಗದಲ್ಲಿ 20 ಸೆಂ.ಮೀ, ಉತ್ತರ ಕನ್ನಡದ ಶಿರಾಲಿಯಲ್ಲಿ 18 ಸೆಂ.ಮೀ. ಮಳೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ