ಬರ್ಗಿ ಅನಿಲ ದುರಂತ: ಮೃತ ಕುಟುಂಬಸ್ಥರಿಗೆ ಪರಿಹಾರ ನೀಡುವಂತೆ ಪ್ರತಿಭಟನೆ

ಗುರುವಾರ, 3 ಸೆಪ್ಟಂಬರ್ 2015 (14:41 IST)
ಕಳೆದ ಮಂಗಳವಾರ ನಡೆದ ಅನಿಲ ಸ್ಫೋಟ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸರ್ಕಾರ ಪರಿಹಾರವನ್ನು ನೀಡಬೇಕೆಂದು ಒತ್ತಾಯಿಸಿ ಜಿಲ್ಲೆಯ ಕುಮಟಾ ತಾಲೂಕಿನ ಬರ್ಗಿ ಗ್ರಾಮದಲ್ಲಿ ಗ್ರಾಮಸ್ಥರು ಇಂದು ಪ್ರತಿಭಟನೆ ನಡೆಸಿದರು. 
 
ಇಲ್ಲಿನ ರಾಷ್ಟ್ರೀಯ ಹೆದ್ದಾರಿ 17ರಲ್ಲಿ ಟೈರ್‌ಗಳಿಗೆ ಬೆಂಕಿ ಹಚ್ಚುವ ಮೂಲಕ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು, ಮೃತರ ಕುಟುಂಬಗಳಿಗೆ ಕೂಡಲೇ ಸೂಕ್ತ ಪರಿಹಾರ ಒದಗಿಸಬೇಕು. ಅಲ್ಲದೆ ಹಾನಿಗೊಳಗಾಗಿರುವ ಮನೆಗಳ ದರಸ್ತಿಗೂ ಕೂಡ ಸರ್ಕಾರ ನೆರವಿಗೆ ಬರಬೇಕೆಂದು ಒತ್ತಾಯಿಸಿದರು. ಪ್ರತಿಭಟನೆ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಂ ಸಂಭವಿಸಿತ್ತು. 
 
ಇನ್ನು ಕಳೆದ ಮಂಗಳವಾರ ಗ್ರಾಮದ ಹೆದ್ದಾರಿಯಲ್ಲಿ ಸಂಭವಿಸಿದ್ದ ಈ ಅನಿಲ ದುರಂತದಲ್ಲಿ ಇಲ್ಲಿಯವರೆಗೆ ನಾಲ್ವರು ಸಾರ್ವಜನಿಕರು ಸಾವನ್ನಪ್ಪಿದ್ದಾರೆ. ಮಂಗಳವಾರ ಬೆಳಗ್ಗೆ 5.30ರ ವೇಳೆಯಲ್ಲಿ ಈ ದುರಂತ ಸಂಭವಿಸಿ ಇಬ್ಬರು ಮಕ್ಕಳೂ ಸೇರಿದಂತೆ ಒಟ್ಟು 13 ಮಂದಿ ಗಾಯಗೊಂಡಿದ್ದರು. ಇಂದು ಶಕೀಲಾ ಎಂಬ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 4ಕ್ಕೆ ಏರಿಕೆಯಾಗಿದೆ.  

ವೆಬ್ದುನಿಯಾವನ್ನು ಓದಿ