ಬೆಂಗಳೂರು, ಸೆ.8: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಹೊಸದಿಲ್ಲಿಗೆ ಭೇಟಿ ನೀಡಿದ್ದು, ಹಣಕಾಸು, ಲೋಕೋಪಯೋಗಿ ಸಚಿವರನ್ನು ಭೇಟಿಯಾಗಲಿರುವುದಾಗಿ ತಿಳಿಸಿದರು. ಆರ್.ಟಿ.ನಗರದಲ್ಲಿರುವ ತಮ್ಮ ನಿವಾಸದ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಲೋಕೋಪಯೋಗಿ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಸ್ತಾವನೆಗಳ ಬಗ್ಗೆ ಚರ್ಚೆ ನಡೆಸಲಿರುವುದಾಗಿ ತಿಳಿಸಿದರು.
ವಸತಿ ಹಾಗೂ ನಗರಾಭಿವೃದ್ಧಿ ಸಚಿವರನ್ನೂ ಭೇಟಿಯಾಗಲಿದ್ದು, ರಾಜ್ಯದ ವಿವಿಧ ಪ್ರಸ್ತಾವನೆಗಳ ಬಗ್ಗೆ ಚರ್ಚೆ ನಡೆಸಿದ್ದೇನೆ. ಹಣಕಾಸಿನ ಸಚಿವರ ಬಳಿ ಕೇಂದ್ರ ಪ್ರಾಯೋಜಿತ ಯೋಜನೆಗಳಿಗೆ ಅನುದಾನ ಬಿಡುಗಡೆ ಸಲುವಾಗಿ ದಿಲ್ಲಿಗೆ ತೆರಳಲಿರುವುದಾಗಿ ಅವರು ಹೇಳಿದರು.
ವಸತಿ ಮತ್ತು ನಗರಾಭಿವೃದ್ಧಿ ಸಂಬಂಧಿಸಿದಂತೆ ಕೇಂದ್ರ ಸಚಿವರು ಬೆಂಗಳೂರಿಗೆ ಬಂದಾಗ ಹಲವಾರು ಯೋಜನೆಗಳ ಬಗ್ಗೆ ಚರ್ಚೆಯಾಗಿತ್ತು. ನಗರ ವಸತಿ ಹಾಗೂ ಮೆಟ್ರೋ ವಿಸ್ತರಣೆ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ನಿಫಾ ವೈರಾಣು ಕುರಿತು ಸಂಪೂರ್ಣ ಮಾಹಿತಿ ಪಡೆಯಲು ತಜ್ಞರಿಗೆ ಸೂಚಿಸಲಾಗಿದೆ. ಕೇರಳ ಗಡಿಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ನಿಗಾ ಇಡಲಾಗಿದೆ ಎಂದ ಅವರು, ಬೆಂಗಳೂರು ನಗರದಲ್ಲಿ ಗುಂಡಿಗಳನ್ನು ಮುಚ್ಚುವ ಸಂಬಂಧ ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸಲು ಬಿಬಿಎಂಪಿ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.