ಬಿಬಿಎಂಪಿ ಚುನಾವಣೆ ವಿಚಾರ: ಸರ್ಕಾರದ ಮೇಲ್ಮನವಿಗೆ ಜಯ

ಶುಕ್ರವಾರ, 24 ಏಪ್ರಿಲ್ 2015 (10:58 IST)
ಬಿಬಿಎಂಪಿ ಚುನಾವಣೆ ವಿಷಯಕ್ಕೆ ಸಂಬಂಧಿಸಿದಂತೆ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಹೈಕೋರ್ಟ್‌ನ ವಿಭಾಗೀಯ ಪೀಠ ಇಂದು ಪುರಸ್ಕರಿಸಿ ಆದೇಶ ಹೊರಡಿಸಿದ್ದು, ಚುನಾವಣೆ ನಡೆಸಲು ಸರ್ಕಾರಕ್ಕೆ ಅವಕಾಶ ಕಲ್ಪಿಸಿದೆ. ಈ ಮೂಲಕ ಏಕ ಸದಸ್ಯ ಪೀಠದ ಆದೇಶವನ್ನು ರದ್ದು ಪಡಿಸಿದೆ. 
 
ಬಿಬಿಎಂಪಿಗೆ ಚುನಾವಣೆ ನಡೆಸುವ ವಿಷಯಕ್ಕೆ ಸಂಬಂಧಿಸಿದಂತೆ ಈ ಹಿಂದೆ ಹೈಕೋರ್ಟ್ ಏಕ ಸದಸ್ಯ ಪೀಠ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸರ್ಕಾರವು ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಲಯ, ಸರ್ಕಾರಕ್ಕೆ ಚುನಾವಣೆ ನಡೆಸಲು ಅವಕಾಶ ನೀಡಿ ಆದೇಶಿಸಿದೆ. 
 
ಪ್ರಕರಣದ ವಿವರವೇನು ?
ಈ ಹಿಂದೆ ಪ್ರತಿಕ್ರಿಯಿಸಿದ್ದ ಸರ್ಕಾರ, ಬಿಬಿಎಂಪಿಯನ್ನು ಸೂಪರ್ ಸೀಡ್ ಮಾಡುವುದು ಹಾಗೂ ವಿಭಜಿಸುವುದಕ್ಕೆ ಸರ್ಕಾರ ಮುಂದಾಗಿದ್ದು, ಬಿಬಿಎಂಪಿ ಚುನಾವಣೆ ನಡೆಸಲು ಸಮಯಾವಕಾಶ ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಚುನಾವಣೆಯನ್ನು ತಡವಾಗಿ ನಡೆಸಲಾಗುವುದು ಎಂದು ಸರ್ಕಾರ ಸ್ಪಷ್ಟಪಡಿಸಿತ್ತು. ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ಬಿಬಿಎಂಪಿಯ ಇಬ್ಬರು ಬಿಜೆಪಿ ಸದಸ್ಯರು ಹೈಕೋರ್ಟ್ ಮೆಟ್ಟಿಲೇರಿದ್ದರು. ಬಳಿಕ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಏಕ ಸದಸ್ಯ ಪೀಠ, ಸರ್ಕಾರಕ್ಕೆ ಮೇ 31ರ ಒಳಗೆ ಚುನಾವಣೆ ನಡೆಸುವಂತೆ ಸೂಚಿಸಿ ಆದೇಶಿಸಿತ್ತು. ಬಳಿಕ ಸರ್ಕಾರವು ಏಕ ಸದಸ್ಯ ಪೀಠದ ತೀರ್ಪನ್ನು ಪ್ರಶ್ನಿಸಿ ಮತ್ತೆ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಅರ್ಜಿಯನ್ನು ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆಯನ್ನು ಇಂದು ನಡೆಸಿದ ವಿಭಾಗೀಯ ಪೀಠ, ಬಿಬಿಎಂಪಿ ಚುನಾವಣೆ ನಡೆಸಲು ಸರ್ಕಾರಕ್ಕೆ ಕಾಲಾವಕಾಶ ನೀಡಿ ಆದೇಶಿಸಿದೆ.  
 
ಆದೇಶದ ಪರಿಣಾಮ: 
ತೀರ್ಪು ಹೊರ ಬಿದ್ದ ಬಳಿಕ ಬಿಬಿಎಂಪಿಯ ಬಿಜೆಪಿ ಸದಸ್ಯರ ಪರ ವಕೀಲ ವಿ. ಲಕ್ಷ್ಮಿನಾರಾಯಣ್ ಅವರು ಪೀಠವನ್ನು ಸಂಪರ್ಕಿಸಿ ನೀಡಿರುವ ಆದೇಶಕ್ಕೆ 7 ದಿನಗಳ ಕಾಲ ತಡೆಯಾಜ್ಞೆ ನೀಡಬೇಕು. ಅಷ್ಟರೊಳಗೆ ವಿಭಾಗೀಯ ಪೀಠದ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಕ್ಯುರೇಟೀವ್ ಅರ್ಜಿಯನ್ನು ಸಲ್ಲಿಸಲಾಗುವುದು ಎಂದು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠ ಆದೇಶಕ್ಕೆ ತಡೆಯಾಜ್ಞೆ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿ ವಿಚಾರಣೆ ಮುಗಿಸಿತು.  

ವೆಬ್ದುನಿಯಾವನ್ನು ಓದಿ