ಬಿಬಿಎಂಪಿ ಗದ್ದುಗೆ ಏರಲು ಜೆಡಿಎಸ್-ಕಾಂಗ್ರೆಸ್ ಪಕ್ಷಗಳ ಮಹತ್ವದ ಸಭೆ

ಬುಧವಾರ, 2 ಸೆಪ್ಟಂಬರ್ 2015 (11:24 IST)
ಬಿಬಿಎಂಪಿಯ ಅಧಿಕಾರದ ಚುಕ್ಕಾಣಿಯನ್ನು ಹಿಡಿಯಲು ಕಾಂಗ್ರೆಸ್ ಹಾಗೂ ಜೆಡಿಎಸ್ ತೀರ್ಮಾನಿಸಿದ್ದು, ಸಿಎಂ ಸಿದ್ದರಾಮಯ್ಯ ಅವರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಇಂದು ಮಹತ್ವದ ಸಭೆ ನಡೆಸಲಾಗುತ್ತಿದೆ. 
 
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯುತ್ತಿರುವ ಈ ಸಭೆಯಲ್ಲಿ ಕಾಂಗ್ರೆಸ್ ಪರವಾಗಿ ಕರ್ನಾಟಕ ಪ್ರಾದೇಶಿಕ ಕಾಂಗ್ರೆಸ್‌ನ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹಾಗೂ ರಾಷ್ಟ್ರೀಯ ಕಾರ್ಯದರ್ಶಿ ಬಿ.ಕೆ.ಹರಿಪ್ರಸಾದ್ ಭಾಗವಹಿಸಿದ್ದರೆ, ಜೆಡಿಎಸ್ ಪರವಾಗಿ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಜಮೀರ್ ಅಹ್ಮದ್ ಖಾನ್ ಅವರು ಭಾಗವಹಿಸಿ ಅಂತಿಮ ಮಾತುಕತೆ ನಡೆಸುತ್ತಿದ್ದಾರೆ. ಸಭೆಯಲ್ಲಿ ಬಿಬಿಎಂಪಿ ಅಧಿಕಾರ ಹಿಡಿದ ನಂತರದ ಎರಡೂ ಪಕ್ಷಗಳಿಗೆ ಸಂಬಂಧಿಸಿದ ಸಾಧಕ-ಬಾಧಕಗಳ ಕುರಿತು ಚರ್ಚಿಸಲಾಗುತ್ತಿದೆ ಎಂದು ಹೇಳಲಾಗಿದೆ. 
 
ಇನ್ನು ಕಳೆದ ಎರಡು ದಿನಗಳ ಹಿಂದೆ ಪ್ರತಿಕ್ರಿಯಿಸಿದ್ದ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರು ಬೆಂಗಳೂರಿನ ಅಭಿವೃದ್ಧಿ ದೃಷ್ಟಿಯಿಂದ ಕಾಂಗ್ರೆಸ್ ಗೆ ಬೆಂಬಲ ನೀಡುವುದಾಗಿ ತಿಳಿಸಿದ್ದರು. ಅಲ್ಲದೆ ನಿನ್ನೆ ಪ್ರತಿಕ್ರಿಯಿಸಿದ್ದ ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರಾಧ್ಯಕ್ಷ ಹೆಚ್.ಡಿ.ದೇವೇಗೌಡ ಅವರೂ ಪ್ರತಿಕ್ರಿಯಿಸಿ ಮೈತ್ರಿ ಸಂಬಂಧ ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಿದರೆ ಸಾಕು. ಅಲ್ಲದೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವುದು ಮುಗಿದ ಅಧ್ಯಾಯ ಎಂದಿದ್ದರು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ದೃಢಪಟ್ಟ ಹಿನ್ನೆಲೆಯಲ್ಲಿ ಇಂದು ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯುತ್ತಿದೆ. 

ವೆಬ್ದುನಿಯಾವನ್ನು ಓದಿ