ಬೆಳಗಾವಿ ಅಧಿವೇಶನದಲ್ಲಿ ಪ್ರತಿಭಟನೆ: 300ಕ್ಕೂ ಹೆಚ್ಚಿನ ರೈತರ ಬಂಧನ

ಸೋಮವಾರ, 21 ನವೆಂಬರ್ 2016 (12:55 IST)
ಬರ ಪರಿಹಾರ ನಿರ್ವಹಣೆಯಲ್ಲಿ ವಿಫಲ, ಮಹದಾಯಿ ಸಮಸ್ಯೆ ಪರಿಹಾರ ಹಾಗೂ ಉತ್ತರ ಕರ್ನಾಟಕ ರೈತರ ಸಮಸ್ಯೆಗಳ ಇತ್ಯರ್ಥ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಲು ಆಗಮಿಸುತ್ತಿದ್ದ 300 ಕ್ಕೂ ಹೆಚ್ಚು ರೈತರನ್ನು ಪೊಲೀಸರು ಬಂಧಿಸಿದ್ದಾರೆ.
 
ಜಮಖಂಡಿಯಲ್ಲಿ 10 ರೈತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು, ಪ್ರತಿಭಟನೆಗೆ ಆಗಮಿಸುತ್ತಿದ್ದ ರೈತರನ್ನು ಅವರ ಹಳ್ಳಿಗಳಲ್ಲಿಯೇ ತಡೆದು ಪೊಲೀಸರು ಬಂಧಿಸಿದ್ದಾರೆ. ಇನ್ನೂ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಹಲವು ರೈತ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.  
 
ರೈತರ ಬಂಧನ ಕ್ರಮವನ್ನು ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರ ಶಾಂತಕುಮಾರ್ ತೀವ್ರವಾಗಿ ಖಂಡಿಸಿದ್ದು, ರಾಜ್ಯ ಪೊಲೀಸರು ಬಲಪ್ರಯೋಗಿಸಿ ನಮ್ಮ ಚಳುವಳಿಯನ್ನು ಹತ್ತಿಕ್ಕುವ ಯತ್ನ ಮಾಡುತ್ತಿದ್ದಾರೆ. ನಮ್ಮ ಸಮಸ್ಯೆ ಬಗೆಹರಿಸುವುದನ್ನು ಬಿಟ್ಟು ರೈತರನ್ನು ಗೂಂಡಾಗಳಂತೆ ಬಂಧಿಸುತ್ತಿರುವ ರಾಜ್ಯ ಸರಕಾರಕ್ಕೆ ತಕ್ಕ ಪಾಠ ಕಲಿಸಬೇಕು ಎಂದು ಎಚ್ಚರಿಕೆ ನೀಡಿದರು. 
 
ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಮಾತನಾಡಿ. ಬರ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿರುವ ರಾಜ್ಯ ಸರಕಾರ ರೈತರನ್ನು ಬಂಧಿಸಿರುವ ಕ್ರಮ ಖಂಡನೀಯ. ಚಳುವಳಿ ನಮ್ಮ ಹಕ್ಕು. ನಮ್ಮ ಬೇಡಿಕೆಗಳ ಈಡೇರಿಕೆಗೆ ಚಳುವಳಿ ನಡೆಸುವುದೇ ನಮ್ಮ ಮಾರ್ಗ. ಆದರೆ, ರಾಜ್ಯ ಸರಕಾರ ರೈತರ ಚಳುವಳಿಯನ್ನು ತಡೆಯುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ