ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳಲ್ಲಿ 41 ಕ್ಷೇತ್ರಗಳಿದ್ದು, ಅದರಲ್ಲಿ ಬಿಜೆಪಿ 19, ಕಾಂಗ್ರೆಸ್ 18, ಜೆಡಿಎಸ್ 4 ಕ್ಷೇತ್ರವನ್ನು ಪಡೆದುಕೊಂಡಿದೆ. ಈ ಬಾರಿ ಚುನಾವಣೆಯಲ್ಲಿ ಮತ್ತಷ್ಟು ಕ್ಷೇತ್ರವನ್ನು ತನ್ನ ತೆಕ್ಕೆಗೆ ಪಡೆದುಕೊಳ್ಳಲು ಬಿಜೆಪಿ ಹೈಕಮಾಂಡ್ ಗಮನ ಹರಿಸಿದೆ.
ಬಳ್ಳಾರಿ, ವಿಜಯನಗರ, ರಾಯಚೂರು, ಕೊಪ್ಪಳ ಭಾಗದ ನಾಲ್ಕು ಜಿಲ್ಲೆಗಳಲ್ಲಿ ಒಟ್ಟು 22 ಕ್ಷೇತ್ರಗಳ ಪೈಕಿ 10 ಕ್ಷೇತ್ರದಲ್ಲಿ ಬಿಜೆಪಿ, 10 ಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗೂ ಎರಡು ಕ್ಷೇತ್ರದಲ್ಲಿ ಜೆಡಿಎಸ್ ಅಧಿಕಾರದಲ್ಲಿದೆ. 2008ರಲ್ಲಿ ಬಿಜೆಪಿ ಸರ್ಕಾರ ರಚನೆಗೆ ಹೆಚ್ಚಿನ ಪಾತ್ರವಹಿಸಿದ್ದ ಬಳ್ಳಾರಿ ಹಾಗೂ ವಿಜಯನಗರ ಭಾಗದ ಕ್ಷೇತ್ರಗಳಲ್ಲಿ ಚುನಾವಣೆ ರಣತಂತ್ರ ಹೆಣೆಯಲಾಗುತ್ತಿದೆ.
ಪರಿಶಿಷ್ಟ ಪಂಗಡದ ಪ್ರಮುಖ ನಾಯಕ, ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಕಳೆದ ಬಾರಿ ಚುನಾವಣೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಈ ಬಾರಿ ತವರು ಜಿಲ್ಲೆಯ ಸಂಡೂರು ಇಲ್ಲವೇ ಬಳ್ಳಾರಿ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಈಗಾಗಲೇ ಇಂಗಿತ ವ್ಯಕ್ತಪಡಿಸಿದ್ದಾರೆ.