ವಕ್ಫ್‌ ಆಸ್ತಿ ಕಾಪಾಡುತ್ತೇವೆಂದು ಬಿಜೆಪಿ ಪ್ರಣಾಳಿಕೆಯಲ್ಲೇ ಘೋಷಿಸಿತ್ತು: ಸಿದ್ದರಾಮಯ್ಯ

Sampriya

ಸೋಮವಾರ, 4 ನವೆಂಬರ್ 2024 (17:02 IST)
ಹುಬ್ಬಳ್ಳಿ: ವಕ್ಫ್ ಆಸ್ತಿ ಕಾಪಾಡುವುದಾಗಿ ಬಿಜೆಪಿ ತನ್ನ ಪ್ರಣಾಳಿಕೆಯಲ್ಲೇ ಘೋಷಣೆ ಮಾಡಿತ್ತು. ಇದೀಗ ರಾಜಕೀಯ ಕಾರಣಕ್ಕಾಗಿ ಉಲ್ಟಾ ಹೊಡೆದಿದ್ದಾರೆಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಹುಬ್ಬಳ್ಳಿಯಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ಒತ್ತುವರಿಯಾಗಿರುವ ಇಂಚಿಂಚು ವಕ್ಫ್ ಆಸ್ತಿಯನ್ನು ಕಾಪಾಡುವುದಾಗಿ ಹೇಳಿದ್ದರು. ಆದರೆ ಇದೀಗ ಅವರು ತನ್ನ ಹೇಳಿಕೆಯನ್ನು ತಿರುಚಲಾಗಿದೆ ಎಂದು ಹೇಳುತ್ತಿದ್ದಾರೆ. ಇದೆಲ್ಲಾ ರಾಜಕೀಯ ಕಾರಣಕ್ಕಾಗಿ ಎಂದು ವಾಗ್ದಾಳಿ ನಡೆಸಿದರು.

ಕ್ಫ್ ಆಸ್ತಿ ವಿಚಾರ ನಿನ್ನೆ ಮೊನ್ನೆಯದಲ್ಲ. ಬಿಜೆಪಿ ಸರ್ಕಾರದ ಕಾಲದಲ್ಲೂ ನೋಟಿಸ್‌ ಕೊಟ್ಟಿದ್ದಾರೆ, ಎಲ್ಲಾ ಕಾಲದಲ್ಲಿಯೂ ನೋಟಿಸ್‌ ನೀಡಲಾಗಿದೆ. ಬಿಜೆಪಿ ರಾಜಕಾರಣಕ್ಕಾಗಿ ಈ ವಿಚಾರವನ್ನು ಇಟ್ಟುಕೊಂಡು ಹೋರಾಡುತ್ತಿದ್ದಾರೆ ಎಂದರು.

ನಾನು ಈಗಾಗಲೇ ಸಚಿವರಾದ ಎಚ್.ಕೆ ಪಾಟೀಲ್, ಕೃಷ್ಣ ಬೈರೇಗೌಡ ಅವರೊಂದಿಗೆ ಸಭೆ ನಡೆಸಿ ಯಾವುದೇ ನೋಟಿಸ್‌ ನೀಡಿದ್ದಲ್ಲಿ ಅದನ್ನು ವಾಪಸ್ಸು ಪಡೆಯಬೇಕು ಅಥವಾ ವಿಚಾರಣೆ ಇಲ್ಲದೆಯೇ ಯಾವುದಾದರೂ ಪಹಣಿ ದಾಖಲೆ ಬದಲಾವಣೆಯಾಗಿದ್ದರೆ ಅದನ್ನು ರದ್ದು ಮಾಡಬೇಕು ಹಾಗೂ ಯಾವುದೇ ಕಾರಣಕ್ಕೂ ರೈತರನ್ನು ಒಕ್ಕಲೆಬ್ಬಿಸಬಾರದು ಎಂದು ಸ್ಪಷ್ಟ ನಿರ್ದೇಶನ ನೀಡಿದ್ದಾಗಿದೆ. ಮುಸ್ಲಿಂ , ಹಿಂದು, ಕ್ರಿಶ್ಚಿಯನ್ ಆಗಿರಲಿ, ಒಕ್ಕಲೆಬ್ಬಿಸಬಾರದು ಎಂದು ಬಹಳ ಸ್ಪಷ್ಟವಾಗಿ ಹೇಳಿದ್ದೇನೆ ಎಂದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ