ರಾಯಣ್ಣ ಬ್ರಿಗೇಡ್‌ನ ಚಟುವಟಿಕೆಯಲ್ಲಿ ಭಾಗವಹಿಸುವಂತಿಲ್ಲ: ಈಶುಗೆ ಪರೋಕ್ಷ ಎಚ್ಚರಿಕೆ ನೀಡಿದ ಯಡ್ಡಿ

ಗುರುವಾರ, 12 ಜನವರಿ 2017 (12:05 IST)
ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ನ ಚಟುವಟಿಕೆಯಲ್ಲಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಭಾಗವಹಿಸುವಂತಿಲ್ಲ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ.
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಯಣ್ಣ ಬ್ರಿಗೇಡ್‌ಗೂ ಬಿಜೆಪಿ ಪಕ್ಷಕ್ಕೂ ಯಾವುದೇ ರೀತಿಯ ಸಂಬಂಧ ಇಲ್ಲ. ಬ್ರಿಗೇಡ್‌ನ ಚುಟುವಟಿಕೆಯಲ್ಲಿ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಪಾಲ್ಗೊಳ್ಳುವಂತಿಲ್ಲ ಎಂದು ಖಡಕ್ ಸಂದೇಶ ರವಾನಿಸಿದ್ದಾರೆ.
 
ಈ ಎಲ್ಲಾ ವಿಷಯಗಳ ಕುರಿತು ರಾಷ್ಟ್ರೀಯ ನಾಯಕರು ಗಮನಿಸುತ್ತಿದ್ದಾರೆ. ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗುವವರ ವಿರುದ್ಧ ಸೂಕ್ತ ಸಮಯದಲ್ಲಿ ಸೂಕ್ತ ಕ್ರಮ ಜರುಗಿಸಲಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. 
 
ರಾಜ್ಯ ಬಿಜೆಪಿ ಪಾಳಯದಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತದೆ ಎಂಬ ಕಾರಣಕ್ಕಾಗಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಹೆಸರಿನ ಹೊಸ ಸಂಘಟನೆ ಹುಟ್ಟು ಹಾಕುವ ಮೂಲಕ ಪಕ್ಷದಲ್ಲಿ ತಮ್ಮ ಬಲ ಪ್ರದರ್ಶನ ಮಾಡಲು ಕೆ.ಎಸ್.ಈಶ್ವರಪ್ಪ ಮುಂದಾಗಿದ್ದರು.
 
ಬ್ರಿಗೇಡ್‌ ಸಂಬಂಧ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನಡುವೆ ಗುದ್ದಾಟ ನಡೆಯುತ್ತಿದೆ. ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ನಲ್ಲಿ ಗುರುತಿಸಿಕೊಂಡ ಹಿನ್ನೆಲೆಯಲ್ಲಿ ಮಾಜಿ ಮೇಯರ್ ವೆಂಕಟೇಶ ಮೂರ್ತಿ ಅವರನ್ನು ಬಿಜೆಪಿ ಪಾಳಯದಿಂದ ಅಮಾನತು ಮಾಡಲಾಗಿತ್ತು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ