ಗುರುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಕೋವಿಡ್ ನಿಯಮಗಳನ್ನು ರಾಜ್ಯಾದ್ಯಂತ ಜಾರಿ ಮಾಡಿರುವುದಕ್ಕೆ ಸಂಪುಟದ ಅನೇಕ ಸಚಿವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಹೀಗಾಗಿ 15ರಂದು ತಾಂತ್ರಿಕ ಸಲಹಾ ಸಮಿತಿ ಸದಸ್ಯರ ಜೊತೆ ಸಿಎಂ ಚರ್ಚೆ ನಡೆಸಿದ ಬಳಿಕ ಪಾಸಿಟಿವಿಟ್ ದರ ಶೇ.1ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಹಾಲಿ ಇರುವ ಮಾರ್ಗಸೂಚಿಗಳನ್ನು ಪರಿಷ್ಕರಿಸುವ ಸಾಧ್ಯತೆ ಇದೆ.
ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ, ಬೆಂಗಳೂರು ಹೊರತುಪಡಿಸಿ ಕೆಲವು ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ. ರಾಜಧಾನಿಯಲ್ಲೇ ಶೇ.80ರಷ್ಟು ದೈನಂದಿನ ಪ್ರಕರಣಗಳು ದಾಖಲಾಗುತ್ತಿವೆ. ಬೇರೆ ಜಿಲ್ಲೆಗಳಿಗೂ ಈ ಮಾರ್ಗಸೂಚಿಯನ್ನು ಅಳವಡಿಸುವುದು ಬೇಡ ಎಂದು ಹೇಳಿದ್ದಾರೆ.