ಬಸ್ ನಿಲ್ದಾಣದಲ್ಲಿ ತರಕಾರಿ ವ್ಯಾಪಾರ ಮಾಡಿ ಎಂದ ಬಿಜೆಪಿ ಶಾಸಕ
ಭಾನುವಾರ, 10 ಮೇ 2020 (22:32 IST)
ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ತರಕಾರಿ, ಹೂ, ಹಣ್ಣು ಮಾರಾಟ ಮಾಡಲು ಬಿಜೆಪಿ ಶಾಸಕರೊಬ್ಬರು ವ್ಯವಸ್ಥೆ ಕಲ್ಪಿಸಿದ್ದಾರೆ.
ಕೋವಿಡ್-19 ಹಿನ್ನೆಲೆಯಲ್ಲಿ ವರ್ತಕರು ಹಾಗೂ ಗ್ರಾಹಕರ ಆರೋಗ್ಯ ದೃಷ್ಟಿಯಿಂದ ಕಟ್ಟಿನಕೆರೆ ಮಾರುಕಟ್ಟೆಯಲ್ಲಿ ತರಕಾರಿ, ಹೂ ಮತ್ತು ಹಣ್ಣಿನ ವ್ಯಾಪಾರ ಮಾಡುತ್ತಿರುವ ವ್ಯಾಪಾರಸ್ಥರಿಗೆ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಮಾರಾಟ ಮಾಡಲು ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹಾಸನ ಶಾಸಕ ಪ್ರೀತಂ ಜೆ. ಗೌಡ ತಿಳಿಸಿದ್ದಾರೆ.
ಕಟ್ಟಿನಕೆರೆ ಮಾರುಕಟ್ಟೆ ಮತ್ತು ಎ.ಪಿ.ಎಂ.ಸಿ. ಮಾರುಕಟ್ಟೆಗೆ ಶಾಸಕ ಪ್ರೀತಂ ಜೆ. ಗೌಡ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದರು.
ದೇಶದಲ್ಲಿ ಕೊರೋನಾ ಸೋಂಕಿತರ ಹಾಗೂ ಶಂಕಿತರ ಸಂಖ್ಯೆಯು ಹೆಚ್ಚಾಗುತ್ತಿರುವ ಕಾರಣ ಮಾರುಕಟ್ಟೆಯಲ್ಲಿ ವರ್ತಕರು ಎಚ್ಚೆತ್ತುಕೊಂಡು ಗ್ರಾಹಕರು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ನೋಡಿಕೊಳ್ಳಬೇಕು ಎಂದರು.
ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಹಾಗೂ ಟ್ಯಾಕ್ಸಿ ನಿಲ್ದಾಣದಲ್ಲಿ ವರ್ತಕರಿಗೆ ವ್ಯಾಪಾರ ಮಾಡಲು ಅಂಗಡಿಗಳ ವ್ಯವಸ್ಥೆ ಕಲ್ಪಿಸಲಿದ್ದು, ವ್ಯಾಪಾರಸ್ಥರು ತಮ್ಮ ತರಕಾರಿಗಳನ್ನು ಪದೇ ಪದೇ ಮನೆಗೆ ಹೊತ್ತೊಯ್ಯುವ ಬದಲು ಅಲ್ಲಿಯೇ ಇಟ್ಟರೆ ಅದನ್ನು ನೋಡಿಕೊಳ್ಳಲು ಪೊಲೀಸ್ ಸಿಬ್ಬಂದಿಗಳ ವ್ಯವಸ್ಥೆ ಕಲ್ಪಿಸಿ ತರಕಾರಿಗಳಿಗೆ ಭದ್ರತೆ ನೀಡಲಾಗುತ್ತದೆ ಎಂದು ತಿಳಿಸಿದರು.