ಕಾಂಗ್ರೆಸ್ ಸರ್ಕಾರದ ವಿರುದ್ಧ BJP ಪ್ರತಿಭಟನೆ
ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 135 ಸೀಟುಗಳನ್ನ ಪಡೆದು ಅಭೂತಪೂರ್ವ ಗೆಲುವಿನೊಂದಿಗೆ ಅಧಿಕಾರಕ್ಕೇರಿದ್ದು, ಇದೀಗ ಸಿದ್ದರಾಮಯ್ಯನವರ ಸರ್ಕಾರದ ವಿರುದ್ಧ ಮೊದಲ ಪ್ರತಿಭಟನೆಗೆ ರಾಜ್ಯ BJP ಕರೆ ನೀಡಿದೆ. ಕರ್ನಾಟಕ ಸರ್ಕಾರದ ಮೂರು ಜನ ವಿರೋಧಿ ನಿರ್ಧಾರಗಳನ್ನು ವಾಪಸ್ ಪಡೆಯಲು ಆಗ್ರಹಿಸಿ ಬಿಜೆಪಿ ವತಿಯಿಂದ ಇಂದು ಮತ್ತು ನಾಳೆ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ಕೊಟ್ಟಿದೆ. ಈ ಬಗ್ಗೆ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ತಿಳಿಸಿದ್ದಾರೆ. 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ಎಂದಿದ್ದ ಕಾಂಗ್ರೆಸ್ ಪಕ್ಷ ಈಗ ಷರತ್ತು ವಿಧಿಸಿರುವುದು, ವಿದ್ಯುತ್ ಶುಲ್ಕ ಹೆಚ್ಚಿಸಿರುವುದು ಹಾಗೂ ಹಾಲಿನ ಪ್ರೋತ್ಸಾಹ ಧನ ಕಡಮೆಗೊಳಿಸುವ ನಿರ್ಧಾರಗಳನ್ನು ವಾಪಸ್ ಪಡೆಯುವಂತೆ ಒತ್ತಾಯಿಸಿ ಈ ಪ್ರತಿಭಟನೆ ನಡೆಸಲಾಗುವುದು ಎಂದಿದ್ದಾರೆ. ಈ ಮುಂಚೆ ಮನೆಗಳಲ್ಲಿ ಪ್ರತಿ ತಿಂಗಳು 70 ಯುನಿಟ್ ವಿದ್ಯುತ್ ಬಳಸುತ್ತಿದ್ದರೆ 80 ಯುನಿಟ್ ಬಳಸಿ. ಆದರೆ, ಯಾವುದೇ ಕಾರಣಕ್ಕೂ 80 ಯೂನಿಟ್ ಮೀರುವಂತಿಲ್ಲ ಎಂಬ ಷರತ್ತು ಅಥವಾ ನಿಬಂಧನೆಯನ್ನು ಸರ್ಕಾರ ಹಾಕಿದೆ. ಹಾಗಿದ್ದರೆ ಈ ಹಿಂದೆ 200 ಯುನಿಟ್ ಎಂದಿದ್ದೀರಲ್ಲವೇ? ಆ ಮಾತನ್ನು ನಡೆಸಿ ಕೊಡದೆ ಮಾತು ತಪ್ಪಿದವರು ಅಥವಾ ವಚನಭ್ರಷ್ಟತೆ ಆದಂತಲ್ಲವೇ ಎಂದು ಪ್ರಶ್ನಿಸಿದ್ದಾರೆ.