ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ಗೆ ಬಿಜೆಪಿ ಬ್ರೆಕ್: ಆರ್.ಅಶೋಕ್

ಗುರುವಾರ, 13 ಅಕ್ಟೋಬರ್ 2016 (20:05 IST)
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ವಿಚಾರ ಮುಗಿದ ಅಧ್ಯಾಯ. ಇನ್ನು ಮುಂದೆ ಬ್ರಿಗೇಡ್ ಸೇರಿದಂತೆ ಮತ್ತಾವುದೇ ಸಂಘಟನೆ ಇರುವುದಿಲ್ಲ ಎಂದು ಮಾಜಿ ಡಿಸಿಎಂ ಆರ್. ಅಶೋಕ್ ಸ್ಪಷ್ಟಪಡಿಸಿದ್ದಾರೆ.
 
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ಗೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪನವರ ಜೊತೆ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ರಾಮ್‌ಲಾಲ್ ಅವರು ಮಾತನಾಡಿದ್ದಾರೆ. ಸದ್ಯದರಲ್ಲೇ ಇವರಿಬ್ಬರ ಮಧ್ಯದ ಭಿನ್ನಮತ ಶಮನವಾಗಲಿದೆ ಎಂದು ಹೇಳಿದರು.
 
ರಾಜ್ಯ ಬಿಜೆಪಿ ಘಟಕದಲ್ಲಿ ಸಣ್ಣ ಪುಟ್ಟ ಗೊಂದಲಗಳಿರುವುದು ನಿಜ. 10 ರಿಂದ 15 ದಿನಗಳಲ್ಲಿ ಎಲ್ಲ ಗೊಂದಲಗಳಿಗೂ ತೆರೆ ಬಿಳಲಿದೆ ಎಂದು ಮಾಜಿ ಡಿಸಿಎಂ ಆರ್. ಅಶೋಕ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 
 
ರಾಜ್ಯ ಬಿಜೆಪಿ ಪಾಳಯದಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತದೆ ಎಂಬ ಕಾರಣಕ್ಕಾಗಿ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಬ್ರಿಗೇಡ್ ಹೆಸರಿನ ಹೊಸ ಸಂಘಟನೆ ಹುಟ್ಟು ಹಾಕುವ ಮೂಲಕ ಪಕ್ಷದಲ್ಲಿ ತಮ್ಮ ಬಲ ಪ್ರದರ್ಶನ ಮಾಡಲು ಮುಂದಾಗಿದ್ದರು. ಇದಕ್ಕಾಗಿ ಬಿ.ಎಸ್.ಯಡಿಯೂರಪ್ಪ ಹಾಗೂ ಕೆ.ಎಸ್.ಈಶ್ವರಪ್ಪನವರ ಮಧ್ಯ ಜಟಾಪಟಿ ಶುರುವಾಗಿತ್ತು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ