ಬೆಳಗಾವಿ: ಸಿಎಂ ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಮುಗಿಸಲು ಹುನ್ನಾರ ನಡೆಯುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಆರೋಪಿಸಿದರು.
ಮುಡಾ ಹಗರಣ ವಿರೋಧಿಸಿ ಬಿಜೆಪಿ- ಜೆಡಿಎಸ್ ಕೈಗೊಂಡಿರುವ ಪಾದಯಾತ್ರೆ ಬಗ್ಗೆ ಪ್ರತಿಕ್ರಿಯಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಶೋಷಿತ ವರ್ಗದವರ ದೊಡ್ಡ ಧ್ವನಿ. ಅವರ ವಿರುದ್ಧ ಬಿಜೆಪಿಯವರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಿಎಂ ಸಿದ್ದರಾಮಯ್ಯ ಅವರು ನಮ್ಮ ರಾಜ್ಯಕ್ಕೆ ಅನ್ಯಾಯವಾದಾಗಲೆಲ್ಲ ಕೇಂದ್ರದ ವಿರುದ್ಧ ಧ್ವನಿ ಎತ್ತಿದ್ದಾರೆ. ರಾಜ್ಯದ ಪಾಲಿನ ತೆರಿಗೆ ಹಣ ಬಾರದಿದ್ದಾಗ ದೆಹಲಿಗೆ ನಿಯೋಗ ಕೊಂಡೊಯ್ದು ಪ್ರತಿಭಟಿಸಿದ್ದಾರೆ. ಸುಪ್ರೀಂಕೋರ್ಟ್‌ನಿಂದ ಕೇಂದ್ರಕ್ಕೆ ಛೀಮಾರಿ ಹಾಕಿಸಿ, ಕಳೆದ ವರ್ಷ ಬರ ಪರಿಹಾರ ಪಡೆದಿದ್ದಾರೆ. ಇವೆಲ್ಲ ಬೆಳವಣಿಗೆಯಿಂದ ಕಂಗೆಟ್ಟ ಬಿಜೆಪಿಯವರು, ರಾಜಕೀಯವಾಗಿ ಸಿದ್ದರಾಮಯ್ಯ ಮುಗಿಸಲು ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ದೂರಿದರು.
ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ಯಾವುದೇ ತಪ್ಪಿಲ್ಲ. ಬಿಜೆಪಿ ಸರ್ಕಾರದ ಅವಧಿಯಲ್ಲೇ 50:50 ಯೋಜನೆ ಜಾರಿಗೆ ತರಲಾಗಿದೆ ಎಂದರು.