ಶಿವಮೊಗ್ಗ : ರಾಜ್ಯದ ಅಡಿಕೆ ತೋಟಗಳಲ್ಲಿ ಹಬ್ಬಿರುವ ಎಲೆಚುಕ್ಕೆ ರೋಗದ ಬಗ್ಗೆ ಅಧ್ಯಯನ ನಡೆಸಿ ಪರಿಹಾರ ಕಂಡುಕೊಳ್ಳಲು ಕೇಂದ್ರ ಸರ್ಕಾರದ ಏಳು ಮಂದಿ ತಜ್ಞರನ್ನು ಒಳಗೊಂಡ ಸಮಿತಿ ಮುಂದಿನ ವಾರ ರಾಜ್ಯಕ್ಕೆ ಆಗಮಿಸಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮಲೆನಾಡು ಹಾಗೂ ಕರಾವಳಿ ಭಾಗದ ರೈತರು ಎದುರಿಸುತ್ತಿರುವ ಸಂಕಷ್ಟಕ್ಕೆ ಕೇಂದ್ರ ತಕ್ಷಣ ಸ್ಪಂದಿಸಿದ್ದು, ಅಡಿಕೆ ಬೆಳೆಗೆ ಎದುರಾಗಿರುವ ರೋಗ ನಿವಾರಣೆಗೆ ಸಮಿತಿ ಪರಿಹಾರ ಕಂಡುಕೊಳ್ಳಲು ಸಹಕಾರಿಯಾಗಲಿದೆ ಎಂದರು.
ಇತ್ತೀಚೆಗೆ ರಾಜ್ಯ ಅಡಿಕೆ ಬೆಳೆಗಾರರ ಆತಂಕಕ್ಕೆ ಕಾರಣವಾದ ಎಲೆ ಚುಕ್ಕೆ ರೋಗಕ್ಕೆ ಪರಿಹಾರ ಬಯಸಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಕೇಂದ್ರ ಕೃಷಿ ಸಚಿವ ನರೆಂದ್ರ ಸಿಂಗ್ ತೋಮರ್ ಅವರಿಗೆ ನವದೆಹಲಿಯಲ್ಲಿ ನಿಯೋಗ ಭೇಟಿಯಾಗಿ ಮನವಿ ಸಲ್ಲಿಸಿತ್ತು.
ಕೇಂದ್ರ ಸರ್ಕಾರ ಸಮಸ್ಯೆಯ ಪರಿಹಾರಕ್ಕೆ ಪೂರಕವಾಗಿ ಸ್ಪಂದಿಸಿ ಸಮಿತಿ ರಚಿಸಿದೆ ಎಂದರು.