ನವದೆಹಲಿ: ದಸರಾ-ದೀಪಾವಳಿ ಹಬ್ಬದ ವೇಳೆ ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ₹3705 ಕೋಟಿ ಹೆಚ್ಚುವರಿ ತೆರಿಗೆ ಪಾಲನ್ನು ಒದಗಿಸಲಾಗಿದೆ. ಈ ಮೂಲಕ ಹಬ್ಬದ ಸಂಭ್ರಮ ಹೆಚ್ಚಿಸಲಾಗಿದೆ ಎಂದು ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.
Next Gen Gst́ ಕೊಡುಗೆ ನೀಡಿದ ಬೆನ್ನಲ್ಲೇ ಕೇಂದ್ರ ಸರ್ಕಾರ ಇದೀಗ ಕರ್ನಾಟಕ ಸೇರಿದಂತೆ ಎಲ್ಲಾ ರಾಜ್ಯಗಳಿಗೂ ದಸರಾ-ದೀಪಾವಳಿ ಹಬ್ಬದ ವೇಳೆ ಹೆಚ್ಚುವರಿ ತೆರಿಗೆ ಹಂಚಿಕೆಯ ಉಡುಗೊರೆ ನೀಡಿದೆ. ದಸರಾ-ದೀಪಾವಳಿ ಹಬ್ಬಗಳ ಋತುವಿನಲ್ಲಿ ಕೇಂದ್ರ ಸರ್ಕಾರ ಮಹತ್ತರ ನಿರ್ಣಯ ಕೈಗೊಂಡು ಎಲ್ಲಾ ರಾಜ್ಯಗಳಿಗೂ ನೆರವಾಗುವಂತೆ ತೆರಿಗೆ ಹಂಚಿಕೆಯ ಒಂದು ಮುಂಗಡ ಕಂತು ಬಿಡುಗಡೆ ಮಾಡಿದೆ ಎಂದು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ಕರ್ನಾಟಕ ಸೇರಿದಂತೆ ಎಲ್ಲಾ 28 ರಾಜ್ಯ ಸರ್ಕಾರಗಳಿಗೂ ಕೇಂದ್ರ ಹಣಕಾಸು ಸಚಿವಾಲಯ ಒಟ್ಟಾರೆ ₹1,01,603 ಕೋಟಿ ಹೆಚ್ಚುವರಿ ತೆರಿಗೆ ಹಂಚಿಕೆ ಹಣವನ್ನು ಬಿಡುಗಡೆ ಮಾಡಿದೆ ಎಂದು ಮಾಹಿತಿ ನೀಡಿದ್ದಾರೆ.
ರಾಜ್ಯಗಳ ಬಂಡವಾಳ ವೆಚ್ಚವನ್ನು ವೇಗಗೊಳಿಸಲು ಹಾಗೂ ಅಭಿವೃದ್ಧಿ, ಕಲ್ಯಾಣ ಕಾರ್ಯಗಳ ವೆಚ್ಚಕ್ಕೆ ಆರ್ಥಿಕ ನೆರವು ಒದಗಿಸುವ ದಿಸೆಯಲ್ಲಿ ಕೇಂದ್ರ ಸರ್ಕಾರ ದೇಶದ ಎಲ್ಲಾ 28 ರಾಜ್ಯ ಸರ್ಕಾರಗಳಿಗೂ ಬುಧವಾರ ರಾತ್ರಿ ಒಟ್ಟಾರೆ 1,01,603 ಕೋಟಿ ತೆರಿಗೆ ಹಂಚಿಕೆಯನ್ನು ಮುಂಗಡ ಕಂತಾಗಿ ಬಿಡುಗಡೆ ಮಾಡಿದೆ ಎಂದು ಜೋಶಿ ತಿಳಿಸಿದ್ದಾರೆ.