ಸಿದ್ದರಾಮಯ್ಯನವರ ಹೆಸರನ್ನೇ ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸಲಿ:ಛಲವಾದಿ ನಾರಾಯಣಸ್ವಾಮಿ

Krishnaveni K

ಶನಿವಾರ, 19 ಜುಲೈ 2025 (16:41 IST)
ಬೆಂಗಳೂರು: ರಾಜ್ಯದಲ್ಲಿ ಶೂನ್ಯ ಸಾಧನೆ, ಮಿತಿ ಮೀರಿದ ಭ್ರಷ್ಟಾಚಾರಕ್ಕೂ ಒಂದು ಸಮಾವೇಶ ಬೇಕೇ? ಸಿದ್ದರಾಮಯ್ಯನವರೇ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪ್ರಶ್ನಿಸಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ಸಿನ ಶಾಸಕರು ಸರಕಾರದ ವಿರುದ್ಧ ಮುಗಿಬಿದ್ದಿದ್ದಾರೆ. ಭ್ರಷ್ಟಾಚಾರದ ವಿರುದ್ಧ ಅವರೇ ಧ್ವನಿ ಎತ್ತಿದ್ದು, ಸಾಧನೆ ಏನೂ ಆಗಿಲ್ಲ ಎಂದಿದ್ದಾರೆ. ತಾವು ಕ್ಷೇತ್ರಗಳಿಗೆ ಹೋಗಲಾಗುತ್ತಿಲ್ಲ ಎಂದು ಆರೋಪಿಸಿದ ಬಳಿಕ ಕೇವಲ ಕಾಂಗ್ರೆಸ್ ಶಾಸಕರಿಗೆ ತಲಾ 50 ಕೋಟಿ ಅನುದಾನ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ ಎಂದು ಟೀಕಿಸಿದರು.

ಸಿದ್ದರಾಮಯ್ಯನವರು ಇಡೀ ರಾಜ್ಯಕ್ಕೆ ಮುಖ್ಯಮಂತ್ರಿಯಲ್ಲ; ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಮಾತ್ರ ಮುಖ್ಯಮಂತ್ರಿ ಎಂದು ಜನರು ಮಾತನಾಡುತ್ತಾರೆ. ಇದಕ್ಕೆ ನಿಮ್ಮ ಉತ್ತರವೇನು ಸಿದ್ದರಾಮಯ್ಯನವರೇ ಎಂದು ಕೇಳಿದರು. ಹಾಗಿದ್ದರೆ ವಿರೋಧ ಪಕ್ಷಗಳ ಶಾಸಕರು ಕರ್ನಾಟಕದವರಲ್ಲವೇ ಎಂದು ಪ್ರಶ್ನೆಯನ್ನು ಮುಂದಿಟ್ಟರು.

ವಿಪಕ್ಷಗಳ ಕ್ಷೇತ್ರಗಳಿಗೆ ಅಭಿವೃದ್ಧಿ ಬೇಕಿಲ್ಲವೇ? ಮುಖ್ಯಮಂತ್ರಿಗಳು ರಾಜ್ಯದ ಕೆಲಸ ಮಾಡಬೇಡವೇ ಎಂಬ ಪ್ರಶ್ನೆ ಉದ್ಭವವಾಗಿದೆ. ಅವರು ಉತ್ತರಿಸಬೇಕು ಎಂದು ಒತ್ತಾಯಿಸಿದರು. ಕಾಂಗ್ರೆಸ್ಸಿಗರು ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸಬೇಕೆಂಬ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರರ ಸಲಹೆಯಲ್ಲಿ ಏನು ತಪ್ಪಿತ್ತು ಎಂದು ಅವರು ಪ್ರಶ್ನಿಸಿದರು. ನಿಮಗೆ ದಲಿತರನ್ನು ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸಲು ಇಷ್ಟವಿಲ್ಲದಿದ್ದರೆ, ಸಿದ್ದರಾಮಯ್ಯನವರ ಹೆಸರನ್ನೇ ಘೋಷಿಸಲಿ ಎಂದು ತಿಳಿಸಿದರು.

ಕಾಂಗ್ರೆಸ್ಸಿಗೆ ದಲಿತರು ಕೇವಲ ಮತಬ್ಯಾಂಕ್. ಅವರನ್ನು ಕಾಂಗ್ರೆಸ್ ಪಕ್ಷ ಗುಲಾಮರೆಂದು ತಿಳಿದಿದೆ. ಹಿಂದುಳಿದ ವರ್ಗಗಳ ಚಾಂಪಿಯನ್ ಸಿದ್ದರಾಮಯ್ಯನವರ ನೇತೃತ್ವದಲ್ಲೇ ಒಂದು ಸಮಿತಿ ಮಾಡಿದ್ದಾರೆ. ನಿಮ್ಮನ್ನೇ ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಲಿ ಎಂದು ಒತ್ತಾಯಿಸಿದರು. 
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ