ಶಾಲೆ ಆರಂಭದ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಮುಖ್ಯ ಮಾಹಿತಿ
ಶನಿವಾರ, 21 ಆಗಸ್ಟ್ 2021 (10:13 IST)
ಬೆಂಗಳೂರು: ಶಾಲೆಗಳನ್ನು ಆರಂಭಿಸಲು ಈಗಾಗಲೇ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಗೆ ಮಾರ್ಗಸೂಚಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಶಾಲೆ ಆರಂಭದ ಕುರಿತಂತೆ ಈಗಾಗಲೇ ಮಾರ್ಗಸೂಚಿ ನೀಡಲಾಗಿದ್ದು, ಶಾಲೆ ಆರಂಭದ ದಿನ ಬೆಂಗಳೂರಿನ ಕೆಲವು ಶಾಲೆಗಳಿಗೆ ಭೇಟಿ ನೀಡಲಾಗುವುದು. ನಾನು, ಶಿಕ್ಷಣ ಸಚಿವರು ಶಾಲೆಗಳಿಗೆ ಭೇಟಿ ನೀಡುತ್ತೇವೆ. ಶಿಕ್ಷಕರಿಗೆ ಲಸಿಕೆ ನೀಡಲಾಗಿದೆ. ಪೋಷಕರ ಸಮ್ಮತಿಯನ್ನು ಪಡೆದುಕೊಂಡು ಮಕ್ಕಳು ಶಾಲೆಗೆ ಬರಬೇಕಿದೆ. ಯಾವುದೇ ಆತಂಕ ಇಲ್ಲದೆ ಮಕ್ಕಳು ಶಾಲೆಗೆ ಬರಬಹುದು. ಪೋಷಕರು ಕೂಡ ಕೊರೋನಾ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ತಿಳಿಸಿದ್ದು ಮಕ್ಕಳ ಶಿಕ್ಷಣಕ್ಕಾಗಿ ಹಂತ ಹಂತವಾಗಿ ಶಾಲೆಗಳನ್ನು ಆರಂಭ ಮಾಡಲಾಗುವುದು ಎಂದು ಹೇಳಿದ್ದಾರೆ.
ಒಂದು ವರ್ಷದ ನಂತರ ಸೋಮವಾರದಿಂದ ಶಾಲೆ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಗೊಂದಲವಾಗದಂತೆ ನೋಡಿಕೊಳ್ಳಲು ಶಿಕ್ಷಣ ಇಲಾಖೆಗೆ ಸೂಚನೆ ನೀಡಲಾಗಿದೆ. ಕೊರೋನಾ ಲಕ್ಷಣಗಳು ಇದ್ದರೆ ಎಚ್ಚರಿಕೆ ವಹಿಸುವಂತೆ ತಿಳಿಸಿದ್ದು, ವಿದ್ಯಾರ್ಥಿಗಳು, ಶಿಕ್ಷಕರಿಗೆ ಲಕ್ಷಣಗಳಿದ್ದರೆ ನಿರ್ಲಕ್ಷಿಸಬಾರದು. ಲೋಪವಾದಲ್ಲಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.