ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಲ್ಲಿ ಸಿಎಂ ವಿಫಲ: ಬಿ.ಕೆ.ಹರಿಪ್ರಸಾದ್

ಸೋಮವಾರ, 20 ಜೂನ್ 2016 (12:53 IST)
ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ್ತ ಸ್ಫೋಟವಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಲ್ಲಿ ವಿಫಲರಾಗಿದ್ದಾರೆ ಎಂದು ಎಐಸಿಸಿ ಪ್ರಧಾನಕಾರ್ಯದರ್ಶಿ ಬಿ.ಕೆ.ಹರಿಪ್ರಸಾದ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
 
ಸುದ್ದಿಗಾರರೊಂದಿಗೆ ಮಾತನಾಡಿದ ಎಐಸಿಸಿ ಪ್ರಧಾನಕಾರ್ಯದರ್ಶಿ ಬಿ.ಕೆ.ಹರಿಪ್ರಸಾದ್, ರಾಜ್ಯ ಸಚಿವ ಸಂಪುಟದಿಂದ ಹಿರಿಯ ಕಾಂಗ್ರೆಸ್ ನಾಯಕ ವಿ.ಶ್ರೀನಿವಾಸ್ ಪ್ರಸಾದ್ ಅವರನ್ನು ಕೈಬಿಟ್ಟಿರುವುದು ಸರಿಯಲ್ಲ. ಮುಖ್ಯಮಂತ್ರಿಯವರು ದುರ್ಬಲ ವರ್ಗಗಳನ್ನು ಕಡೆಗಣಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಾವು ಅಹಿಂದ ಪರ ಎಂದು ಹೇಳುತ್ತಾರೆ. ಅವರು ಮೊದಲು ಅಹಿಂದದ ಅರ್ಥ ತಿಳಿಸಲಿ. ರಾಜ್ಯದಲ್ಲಿ ಹಿಂದೆಂದು ಕಾಣದ ಭಿನ್ನಮತ ಸ್ಫೋಟವಾಗಿದೆ. ಮುಖ್ಯಮಂತ್ರಿಯವರು ಎಲ್ಲಾ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಿ ಎಂದು ಹೇಳಿದ್ದಾರೆ.
 
ರಾಜ್ಯ ಸರಕಾರ ಶಾಸ್ತ್ರಕ್ಕಾಗೆ ಪಕ್ಷದ ಸಭೆ ನಡೆಸುತ್ತಿದೆ. ಸಚಿವ ಸಂಪುಟ ರಚಿಸಲು ಹೈಕಮಾಂಡ್ ಸಾಕಷ್ಟು ಸಮಯ ನೀಡಿತ್ತು. ಈ ಕುರಿತು ಮುಖ್ಯಮಂತ್ರಿಯವರು ಎಲ್ಲರೊಂದಿಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಬೇಕಿತ್ತು ಎಂದು ಬಿ.ಕೆ.ಹರಿಪ್ರಸಾದ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ