ಮಂಡ್ಯ: ವಿಧಾನಸಭಾಧ್ಯಕ್ಷ ಯು.ಟಿ .ಖಾದರ್ ಅವರಿಗೆ ಬೆದರಿಕೆ ಕರೆ ಬಂದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಬೆದರಿಕೆ ಬಂದಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.
ಮಂಡ್ಯದಲ್ಲಿ ಮಾತನಾಡಿದ ಅವರು, ನನಗೂ ಬೆದರಿಕೆ ಕರೆಗಳು ಬಂದಿವೆ. ಈ ಬಗ್ಗೆ ಪೊಲೀಸ್ ಅಧಿಕಾರಿಗಳಿಗೆ ತಿಳಿಸಿ, ಆರೋಪಿಗಳನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ ಎಂದು ಸಿಎಂ ಹೇಳಿದರು. ಖಾದರ್ ಅವರಿಗೆ ಬೆದರಿಕೆ ಕರೆ ಬಂದಿರುವ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು.
ಕೊಲೆಗೀಡಾದ ಸುಹಾಸ್ ಶೆಟ್ಟಿ ರೌಡಿಶೀಟರ್ ಆಗಿದ್ದ ಎಂದು ಪೊಲೀಸರು ತಿಳಿಸಿದ್ದು, ಎಡಿಜಿಪಿ ಅವರನ್ನು ಸ್ಥಳಕ್ಕೆ ಕಳುಹಿಸಿ ಪರಿಶೀಲಿಸಿಲು ಸೂಚಿಸಿದ್ದೇನೆ. ಮನುಷ್ಯನ ಪ್ರಾಣ ಬಹಳ ಮುಖ್ಯ. ಅಪರಾಧಿಗಳು ಯಾರೇ ಆಗಿದ್ದರೂ ಅವರನ್ನು ಪತ್ತೆ ಹಚ್ಚಿ ದಸ್ತಗಿರಿ ಮಾಡಿ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ ಎಂದರು.
ಬಿಜೆಪಿಯವರು ಯಾವಾಗಲೂ ರಾಜಕೀಯವಾಗಿ ಇಂಥ ಪ್ರಕರಣಗಳನ್ನೇ ಹುಡುಕುತ್ತಾರೆ. ಪೆಹಲ್ಗಾಮ್‌ನಲ್ಲಿ ಉಗ್ರರ ದಾಳಿಗೆ 26 ಮಂದಿ ಮೃತಪಟ್ಟರು. ಪ್ರಧಾನಿ ನರೇಂದ್ರ ಮೋದಿ ಅವರು ಆ ಸ್ಥಳಕ್ಕೆ ಭೇಟಿ ನೀಡಿದ್ದಾರೆಯೇ? ಪ್ರವಾಸಿಗರು ಸೇರುವ ಸ್ಥಳದಲ್ಲಿ ಪೊಲೀಸ್ ಆಗಲಿ, ಭದ್ರತಾ ಪಡೆಯವರನ್ನಾಗಲಿ ನಿಯೋಜಿಸಿರಲಿಲ್ಲ. ಇದು ಭದ್ರತಾ ವೈಫಲ್ಯವಲ್ಲವೇ? ಎಂದು ದೂರಿದರು.