ಸಿಎಂ ನೇತೃತ್ವದಲ್ಲಿಂದು ಕೋವಿಡ್ ಸಭೆ: ಬೆಂಗ್ಳೂರಲ್ಲಿ ಕಠಿಣ ನಿಯಮ
ಶನಿವಾರ, 14 ಆಗಸ್ಟ್ 2021 (08:40 IST)
ಬೆಂಗಳೂರು(ಆ.14): ಕೋವಿಡ್ ಮೂರನೇ ಅಲೆ ಭೀತಿ ಹಿನ್ನೆಲೆಯಲ್ಲಿ ಮುಂದಿನ ಬಿಗಿ ಕ್ರಮಗಳನ್ನು ಕೈಗೊಳ್ಳುವ ಸಂಬಂಧ ಶನಿವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಯಲಿದೆ.
ಪ್ರಸಕ್ತ ಮಾರ್ಗಸೂಚಿ ಅವಧಿ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಮತ್ತಷ್ಟುನಿಯಮಗಳನ್ನು ಪರಿಷ್ಕರಿಸುವ ಸಾಧ್ಯತೆಯಿದೆ. ಗಡಿ ಭಾಗದ ಜಿಲ್ಲೆಗಳ ಜತೆಗೆ ರಾಜಧಾನಿ ಬೆಂಗಳೂರು ಸೇರಿದಂತೆ ಇತರ ಜಿಲ್ಲೆಗಳಲ್ಲಿಯೂ ವಾರಾಂತ್ಯದ ಕಫ್ಮ್ರ್ಯ ಮತ್ತಿತರ ಕಠಿಣ ಕ್ರಮಗಳನ್ನು ಜಾರಿಗೊಳಿಸುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.
ಸಾಲು ಸಾಲು ಹಬ್ಬಗಳು ಬರುತ್ತಿರುವ ಹಿನ್ನೆಲೆಯಲ್ಲಿ ಜನರು ಸೇರದಂತೆ ತಡೆಗಟ್ಟುವ ಉದ್ದೇಶದಿಂದ ಜನಸಂದಣಿ ಪ್ರದೇಶಗಳಲ್ಲಿ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವ ಬಗ್ಗೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ನಿರ್ದೇಶನ ನೀಡುವ ಸಂಭವವಿದೆ.
ಸಂಜೆ 4 ಗಂಟೆಗೆ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಈ ಸಭೆ ನಡೆಯಲಿದ್ದು, ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಕಂದಾಯ ಸಚಿವ ಆರ್.ಅಶೋಕ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಹಾಗೂ ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.