ಬೆಂಗಳೂರು: ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಅಪಪ್ರಚಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಗೆ 42 ನೇ ಎಸಿಎಂಎಂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಇಂದು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಇಬ್ಬರೂ ಜೊತೆಯಾಗಿ ಕೋರ್ಟ್ ಗೆ ಹಾಜರಾತಿ ನೀಡಿದರು. ಈ ವೇಳೆ ನ್ಯಾಯಾಧೀಶರು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರಿಗೂ ಜಾಮೀನು ಮಂಜೂರು ಮಾಡಿದ್ದಾರೆ.
ಕಳೆದ ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ಸರ್ಕಾರದ ವಿರುದ್ಧ ಆಗ ಪ್ರತಿಪಕ್ಷವಾಗಿದ್ದ ಕಾಂಗ್ರೆಸ್ ಪೇಸಿಎಂ ಅಭಿಯಾನ ಮಾಡಿತ್ತು. ಸರ್ಕಾರ ಶೇ.40 ಕಮಿಷನ್ ದಂಧೆಗಿಳಿದಿದೆ ಎಂದು ಆರೋಪಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಎಸ್. ಕೇಶವಪ್ರಸಾದ್ ನ್ಯಾಯಾಲಯಕ್ಕೆ ದೂರು ನೀಡಿದ್ದರು.
ಇಂದು ಸಿಎಂ ಮತ್ತು ಡಿಕೆ ಶಿವಕುಮಾರ್ ಇಬ್ಬರೂ ಕೋರ್ಟ್ ಗೆ ಹಾಜರಾಗಿ ಜಾಮೀನು ಬಾಂಡ್ ಗೆ ಸಹಿ ಹಾಕಿದ್ದಾರೆ. ಕೋರ್ಟ್ ನಿಂದ ಹೊರಬಂದ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ ಇದು ಮಾನನಷ್ಟ ಮೊಕದ್ದಮೆ ಪ್ರಕರಣ ಹೇಗಾಗುತ್ತದೆ? ನಾವು ಅಂದಿನ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಜನರ ಗಮನ ಸೆಳೆದಿದ್ದೆವು ಎಂದಿದ್ದಾರೆ.